ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ: ‘ನಮ್ಮ ಕ್ಷೇತ್ರ-ನಮ್ಮ ಹೊಣೆ’ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು, ಜ.30: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮುಂದಾಗಿರುವ ಆಡಳಿತರೂಢ ಕಾಂಗ್ರೆಸ್ ಪಕ್ಷವು, ಈ ನಿಟ್ಟಿನಲ್ಲಿ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ತಳಮಟ್ಟದಿಂದ ಪಕ್ಷಕ್ಕೆ ಚೈತನ್ಯ ತುಂಬಲು ‘ನಮ್ಮ ಕ್ಷೇತ್ರ-ನಮ್ಮ ಹೊಣೆ’ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.
ಮಂಗಳವಾರ ನಗರದ ಅರಮನೆ ಮೈದಾನದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ನಡೆದ ರಾಜ್ಯ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಚುನಾವಣೆಯನ್ನು ಗೆಲ್ಲಲು ಅನುಸರಿಸಬೇಕಾದ ರಣತಂತ್ರಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ಚುನಾವಣೆ ಗೆಲುವಿನ ಜವಾಬ್ದಾರಿಯನ್ನು ಸ್ಥಳೀಯ ಮುಖಂಡರಿಗೆ ವಹಿಸಲು ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಯಾಗಿ ಎಲ್ಲ ಸಚಿವರು, ಶಾಸಕರು, ಮುಖಂಡರು ತಾವು ಮತದಾನ ಮಾಡುವ ಬೂತ್‌ಗಳಲ್ಲಿ ಪಕ್ಷಕ್ಕೆ ಹೆಚ್ಚಿನ ಮತಗಳನ್ನು ಕ್ರೋಡೀಕರಿಸುವ ಜವಾಬ್ದಾರಿಯನ್ನು ನೀಡಲಾಗಿದೆ.
ಯಾವ ಯಾವ ಬೂತ್‌ಗಳಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಲು ಮುಖಂಡರು ಹಿಂದೆ ಬಿದ್ದಿದ್ದಾರೆ ಎಂಬುದನ್ನು ಮತದಾನದ ಬಳಿಕ ತಪಾಸಣೆ ನಡೆಸಲು ಎಐಸಿಸಿ ತಂಡವನ್ನು ರಚನೆ ಮಾಡುತ್ತಿದೆ. ಈ ತೀರ್ಮಾನದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲ ಶಾಸಕರು, ಸಚಿವರು, ಪಕ್ಷದ ಪದಾಧಿಕಾರಿಗಳು ತಾವು ಮತದಾನ ಮಾಡುವ ಬೂತ್‌ಗಳಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಹೆಚ್ಚಿನ ಮತ ಕೊಡಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ.
ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮುಖಂಡರನ್ನು ಚುನಾವಣೆ ಸಂದರ್ಭದಲ್ಲಿ ಸಕ್ರಿಯವಾಗಿಡಲು ಹೈಕಮಾಂಡ್ ಈ ನೂತನ ಕಾರ್ಯಕ್ರಮವನ್ನು ಪರಿಚಯಿಸಿದೆ. ಈ ಕಾರ್ಯಕ್ರಮದಿಂದಾಗಿ ಪಕ್ಷದಲ್ಲಿ ಅಧಿಕಾರ, ಜವಾಬ್ದಾರಿಯಲ್ಲಿದ್ದರೂ ಸಕ್ರಿಯವಾಗಿ ಕೆಲಸ ಮಾಡದೆ ಕಾಲಹರಣ ಮಾಡುತ್ತಿರುವ ಮುಖಂಡರನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ ಎಂಬ ಲೆಕ್ಕಾಚಾರದಲ್ಲಿ ಹೈಕಮಾಂಡ್ ಇದೆ. ಅಲ್ಲದೆ, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರೂಪಿಸುವಂತಹ ತಂತ್ರಗಳಿಗೆ ಕಾಂಗ್ರೆಸ್ ಯಾವ ರೀತಿಯಲ್ಲಿ ಪ್ರತಿತಂತ್ರ ರೂಪಿಸಬೇಕು ಎಂಬುದರ ಕುರಿತು ಚರ್ಚಿಸಲಾಗಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರವಾರು ಮತದಾರರ ಮನವೊಲಿಕೆಗೆ ಬೇಕಾದ ಕಾರ್ಯಗಳು, ಸರಕಾರದ ಅಭಿವೃದ್ಧಿ ಕಾರ್ಯಗಳ ಪ್ರಚಾರ, ಬೂತ್‌ಮಟ್ಟದಲ್ಲಿ ಪಕ್ಷದ ಬಲವರ್ಧನೆ ಮಾಡುವುದು ಸೇರಿದಂತೆ ಇನ್ನಿತರ ಪ್ರಮುಖ ವಿಚಾರಗಳ ಕುರಿತು ಮುಖಂಡರಿಂದ ವೇಣುಗೋಪಾಲ್ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್, ದಿನೇಶ್ ಗುಂಡೂರಾವ್, ಎಐಸಿಸಿ ಕಾರ್ಯದರ್ಶಿಗಳಾದ ಮಾಣಿಕ್ಯಂ ಠಾಗೂರ್, ಮಧುಯಕ್ಷಿಗೌಡ್, ಸಾಕೆ ಶೈಲಜಾನಾಥ್, ವಿಷ್ಣುನಾಥ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ವೀರಪ್ಪಮೊಯ್ಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.







