ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿಕಲಚೇತನರ ಒಕ್ಕೂಟದಿಂದ ಧರಣಿ

ಬೆಂಗಳೂರು, ಫೆ. 1: ಸೇವಾ ಭದ್ರತೆ ನೀಡುವುದು ಸೇರಿ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ವಿಕಲಚೇತನರ ಮತ್ತು ವಿವಿದೋದ್ದೇಶ ಹಾಗೂ ಗ್ರಾಮೀಣ ಪುನರ್ವಸತಿ ಒಕ್ಕೂಟ ಆಗ್ರಹಿಸಿದೆ.
ಗುರುವಾರ ನಗರದ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ ಉದ್ಯಾನದವರೆಗೆ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಸುಬ್ರಹ್ಮಣ್ಯಂ ನೇತೃತ್ವದಲ್ಲಿ ಮೆರವಣಿಗೆ ನಡೆಸಿದ ಕಾರ್ಯಕರ್ತರು, ರಾಜ್ಯದ ನಾನಾ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಿಕಲಚೇತನ ನೌಕರರ ಸೇವೆಗೆ ಬೆಲೆ ಇಲ್ಲದಂತಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗ್ರಾಮೀಣಾಭಿವದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿಆರ್‌ಡಬ್ಲೂ, ಎಂಆರ್‌ಡಬ್ಲೂ ಆಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಆದರೆ ನಮ್ಮ ಸೇವೆಗೆ ಭದ್ರತೆ ಇಲ್ಲದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ವಿಕಲಚೇತನರನ್ನು ಗುರುತಿಸಿ ಅವರಿಗೆ ಪುನರ್ವಸತಿ ಕಲ್ಪಿಸುವ ಮಹತ್ವಾಕಾಂಕ್ಷೆ ಯೋಜನೆಯಲ್ಲಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಲಾಗುತ್ತಿದೆ. ಆದರೂ, ಸರಕಾರ ನಮ್ಮ ಸೇವೆಗೆ ಸೂಕ್ತ ಗೌರವ ಮತ್ತು ಭದ್ರತೆಯನ್ನು ನೀಡುತ್ತಿಲ್ಲ ಎಂದು ಆರೋಪಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಕೆ.ಸುಬ್ರಹ್ಮಣ್ಯಂ, ಕಳೆದ ಏಳು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಆದರೂ ಸಹ ಕನಿಷ್ಠ ವೇತನ, ಸೇವಾ ಭದ್ರತೆ ಕೂಡ ಇಲ್ಲದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ಹೀಗಾಗಿ ಆತಂಕದಿಂದ ದಿನದೂಡುವ ವಾತಾವರಣ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಕನಿಷ್ಠ ಸಂಬಳ ನೀಡುತ್ತಿರುವ ಪರಿಣಾಮ ಸಂಸಾರ ಸಾಗಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿರ್ದೇಶಕರಿಗೂ ಮನವಿ ಸಲ್ಲಿಸಲಾಗಿದೆ. ಆದರೆ ಇಲಾಖೆ ಅಧಿಕಾರಿಗಳು ನಮ್ಮ ಸಮಸ್ಯೆಯನ್ನು ನಿರ್ಲಕ್ಷ ಮಾಡುತ್ತಿದ್ದಾರೆ. ಹೀಗಾಗಿ ಸರಕಾರ ಇವರನ್ನು ಅಮಾನತುಗೊಳಿಸಬೇಕು, ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಬೇಡಿಕೆಗಳು: ವಿವಿದ್ದೋದ್ದೇಶ, ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರ ಅಧಿನಿಯಮ ಸ್ಥಾಪಿಸಿ ಕಾಯಂಗೊಳಿಸಬೇಕು. ಕನಿಷ್ಠ ವೇತನ, ಆಕಸ್ಮಿಕ ಮರಣ ಹೊಂದಿದರೆ ಐದು ಲಕ್ಷ ಪರಿಹಾರ ನೀಡಬೇಕು ಎಂದ ಅವರು, ಸಾಮಾಜಿಕ ನ್ಯಾಯ ಕಲ್ಪಿಸಬೇಕಾದ ಜವಾಬ್ದಾರಿ ರಾಜ್ಯ ಸರಕಾರದ ಮೇಲಿದೆ. ಒಂದು ವೇಳೆ ನಮ್ಮ ಬೇಡಿಕೆಗಳನ್ನು ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಎಸ್.ಕೃಷ್ಣಪ್ಪ, ರಾಜ್ಯ ಸಂಚಾಲಕ ಜೆ.ದೇವರಾಜ್, ಖಜಾಂಚಿ ಡಿ.ಗುರುಪಾದಪ್ಪ ಸೇರಿದಂತೆ ಇನ್ನಿತರರಿದ್ದರು.







