ವಿಶ್ವಕಪ್ ವಿಜೇತ ಭಾರತದ ಅಂಡರ್-19 ಕ್ರಿಕೆಟ್ ತಂಡಕ್ಕೆ ಅದ್ದೂರಿ ಸ್ವಾಗತ

ಮುಂಬೈ, ಫೆ.5: ಐಸಿಸಿ ಅಂಡರ್-19 ಕ್ರಿಕೆಟ್ ವಿಶ್ವಕಪ್‌ನ್ನು ಮುಡಿಗೇರಿಸಿಕೊಂಡಿರುವ ಭಾರತದ ಕಿರಿಯ ಕ್ರಿಕೆಟಿಗರು ಇಲ್ಲಿನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ಬಂದಿಳಿದಾಗ ಅದ್ದೂರಿ ಸ್ವಾಗತ ನೀಡಲಾಯಿತು.
ಪೃಥ್ವಿ ಶಾ ನಾಯಕತ್ವದ ಭಾರತ ಕ್ರಿಕೆಟ್ ತಂಡವನ್ನು ಮುಂಬೈ ಕ್ರಿಕೆಟ್ ಸಂಸ್ಥೆ(ಎಂಸಿಎ)ಯ ಹಿರಿಯ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು.
ಕ್ರಿಕೆಟ್ ದಂತಕತೆ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ನಾಲ್ಕನೇ ಬಾರಿ ವಿಶ್ವಕಪ್‌ನ್ನು ಜಯಿಸಿ ದಾಖಲೆ ನಿರ್ಮಿಸಿರುವ ಭಾರತ ತಂಡ ಮಧ್ಯಾಹ್ನ 3:30ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿತು.
ಮುಂಬೈ ವಿಮಾನ ನಿಲ್ದಾಣದಲ್ಲಿ ಎಂಸಿಎ ಅಧಿಕಾರಿಗಳಲ್ಲದೆ ನೂರಾರು ಕ್ರಿಕೆಟ್ ಅಭಿಮಾನಿಗಳು ಯುವ ಕ್ರಿಕೆಟ್ ಹೀರೋಗಳನ್ನು ಸ್ವಾಗತಿಸಿದರು.
ನ್ಯೂಝಿಲೆಂಡ್‌ನಲ್ಲಿ ನಡೆದ ವಿಶ್ವಕಪ್ ಟೂರ್ನಿಯುದ್ದಕ್ಕೂ ಪ್ರಾಬಲ್ಯ ಸಾಧಿಸಿ,ಅಜೇಯ ದಾಖಲೆ ಕಾಯ್ದುಕೊಂಡಿದ್ದ ಪೃಥ್ವಿ ಶಾ ಬಳಗ ಶನಿವಾರ ನಡೆದ ಫೈನಲ್‌ನಲ್ಲಿ ಮೂರು ಬಾರಿಯ ಚಾಂಪಿಯನ್ ಆಸ್ಟ್ರೇಲಿಯ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ ಚಾಂಪಿಯನ್‌ಪಟ್ಟಕ್ಕೇರಿತ್ತು.





