ಗುಂಡ್ಲುಪೇಟೆ: ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಚಿನ್ನ ಜಯಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ಗುಂಡ್ಲುಪೇಟೆ,ಫೆ.06: ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕಗಳಿಸಿದ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಕೆಲಸೂರು ಗ್ರಾಮಸ್ಥರು ಸನ್ಮಾನಿಸಿದರು.
ಮುಖ್ಯ ಶಿಕ್ಷಕ ಶಿವಬಸಪ್ಪ ಮಾತನಾಡಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳ ರಾಷ್ಟ್ರಮಟ್ಟದ ಸಾಧನೆ ಗಣನೀಯವಾಗಿದೆ. ಶಾಲೆಯ ಮಕ್ಕಳು ಪ್ರತಿಭಾ ಕಾರಂಜಿ ಸೇರಿದಂತೆ ವಿಭಾಗೀಯ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿ ಶಾಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ವಿದ್ಯೆ ಹಾಗೂ ಕ್ರೀಡೆಯನ್ನು ಹೆಚ್ಚಿನ ಆಸಕ್ತಿಯಿಂದ ಅಭ್ಯಾಸ ಮಾಡಿದರೆ ಉತ್ತಮ ಗುರಿ ಸಾಧಿಸಲು ಸಾಧ್ಯ ಎಂಬುದನ್ನು ವಿದ್ಯಾರ್ಥಿಗಳು ಮಾಡಿ ತೋರಿಸಿದ್ದಾರೆ. ಕಳೆದ ಮೂರು ವರ್ಷಗಳಿಂದಲೂ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಆಸಕ್ತ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡುತ್ತಿರುವುದು ಈ ಸಾಧನೆಗೆ ಬೆನ್ನೆಲುಬಾಗಿದೆ ಎಂದರು.
ಮಕ್ಕಳಿಂದ ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು, ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕ ವೆಂಕಟೇಶನಾಯ್ಕ, ಡಯಟ್‍ನ ಸುಗುಣಾ, ದೈಹಿಕ ಶಿಕ್ಷಣ ಪರಿವೀಕ್ಷಕ ಚಿಕ್ಕಮಲ್ಲಪ್ಪ, ಬಿಆರ್‍ಪಿ ಮುರುಳೀಧರ್, ಸಹ ಶಿಕ್ಷಕರಾದ ರವಿ, ಪರಿಮಳಾ, ಚಂದ್ರಕುಮಾರ್, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಸ್ವಾಮಿ, ಹಳೆಯ ವಿದ್ಯಾರ್ಥಿಗಳಾದ ಪ್ರಭು, ಚಂದ್ರ, ರವಿ, ಸಿದ್ದರಾಜು ಪರಶಿವ ಹಾಗೂ ಇತರರು ಇದ್ದರು.





