ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್‌ಗಳ ತೆರವು ವಿಚಾರ: ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಫೆ.7: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅನಧಿಕೃತ ಫ್ಲೆಕ್ಸ್‌ಗಳನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರಕಾರ ಹಾಗೂ ಬಿಬಿಎಂಪಿಗೆ ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿದೆ.
ಈ ಸಂಬಂಧ ಮಾಯಿಗೌಡ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿದ ಹಂಗಾಮಿ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ಬೆಂಗಳೂರಿನಲ್ಲಿ 23 ಸಾವಿರ ಅನಧಿಕೃತ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್, ಭಿತ್ತಿಪತ್ರಗಳನ್ನು ಅಳವಡಿಸಲಾಗಿದ್ದರೂ ಅದನ್ನು ತೆರವುಗೊಳಿಸಲು ಸರಕಾರ ಹಾಗೂ ಬಿಬಿಎಂಪಿ ಮುಂದಾಗಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿವೆ. ಹೀಗಾಗಿ ಇವುಗಳನ್ನು ತೆರವುಗೊಳಿಸಲು ಬಿಬಿಎಂಪಿ ಹಾಗೂ ಸರಕಾರಕ್ಕೆ ನಿರ್ದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠವು ರಾಜ್ಯ ಸರಕಾರ, ಬಿಬಿಎಂಪಿಗೆ ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿ, ವಿಚಾರಣೆಯನ್ನು ಮುಂದೂಡಿತು.





