ಬಿಬಿಎಂಪಿಯ ಖಾಲಿ ಹುದ್ದೆಗಳು ಶೀಘ್ರದಲ್ಲೇ ಭರ್ತಿ: ಕೆ.ಜೆ.ಜಾರ್ಜ್

ಬೆಂಗಳೂರು, ಫೆ.8: ಬಿಬಿಎಂಪಿಯಲ್ಲಿ 10,320 ಹುದ್ದೆಗಳು ಖಾಲಿ ಇದ್ದು, ಶೀಘ್ರದಲ್ಲಿಯೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಗುರುವಾರ ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರಾಮಚಂದ್ರಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಬಿಎಂಪಿಯಲ್ಲಿ 17,391 ಹುದ್ದೆಗಳು ಮಂಜೂರಾಗಿದ್ದು, 10,320 ಖಾಲಿ ಇರುವ ಹುದ್ದೆಗಳ ಪೈಕಿ 5811 ಪೌರಕಾರ್ಮಿಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ವಿಶೇಷ ನಿಯಮಾವಳಿ ರೂಪಿಸಿ ಶೀಘ್ರ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ಬಿಬಿಎಂಪಿಯಲ್ಲಿ ಮಂಜೂರಾಗಿರುವ ಹುದ್ದೆಗಳ ಪೈಕಿ ಶೇ.42ರಷ್ಟು ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಶೇ.58 ಹುದ್ದೆಗಳು ಖಾಲಿ ಇರುವ ಪರಿಣಾಮ ಬೆಂಗಳೂರಿನ ಸ್ವಚ್ಛತೆ ಜನರ ಆರೋಗ್ಯ ಕಾಮಗಾರಿಗಳ ಅನುಷ್ಠಾನವನ್ನು ಕೈಗೊಳ್ಳುವ ದೃಷ್ಟಿಯಿಂದ ಕೆಲವು ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡು ಹಾಗೂ ತಾಂತ್ರಿಕ ಸಿಬ್ಬಂದಿಗಳನ್ನು ಸರಕಾರದ ವಿವಿಧ ಇಲಾಖೆಗಳಿಂದ ನಿಯೋಜನೆ ಮೇಲೆ ಪಡೆದುಕೊಂಡು ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ ಎಂದರು.







