ಭಾರತೀಯ ಭಾಷಾ ಸಂಸ್ಥೆ ಬೆಂಗಳೂರಿಗೆ ಸ್ಥಳಾಂತರ: ಸಚಿವೆ ಉಮಾಶ್ರೀ

ಬೆಂಗಳೂರು, ಫೆ. 8: ತಮಿಳುನಾಡು ಮಾದರಿಯಲ್ಲೇ ಮೈಸೂರಿನ ಭಾರತೀಯ ಭಾಷಾ ಸಂಸ್ಥೆಯ ಚಟುವಟಿಕೆಗಳನ್ನು ನಡೆಸಲಾಗುವುದು. ಅಲ್ಲದೆ, ಆ ಸಂಸ್ಥೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಕ್ರಮ ವಹಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಸದಸ್ಯ ಗೋಪಾಲಯ್ಯ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಕನ್ನಡ ಶಾಸ್ತ್ರೀಯ ಭಾಷೆ ಸ್ಥಾನಮಾನ ಸಿಕ್ಕಿದೆ. ಅದಕ್ಕೆ ಸಂಬಂಧಪಟ್ಟ ಯೋಜನೆಗಳನ್ನು ಭಾರತೀಯ ಭಾಷಾ ಸಂಸ್ಥೆ ನಿರ್ವಹಿಸುತ್ತಿದೆ. ಅದು ಮೈಸೂರಿನಲ್ಲಿರುವುದಕ್ಕಿಂತ ರಾಜಧಾನಿ ಬೆಂಗಳೂರಿನಲ್ಲಿರುವುದು ಉತ್ತಮ ಎಂಬ ಅಭಿಪ್ರಾಯಗಳಿವೆ. ಈಗಾಗಲೇ ಈ ಬಗ್ಗೆ ಚರ್ಚೆಯಾಗಿವೆ. ಮುಂದಿನ ದಿನಗಳಲ್ಲಿ ಸಂಸ್ಥೆಯನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲಾಗುವುದು ಎಂದ ಅವರು, ಭಾಷಾ ಭಾರತಿಗೆ ಕೇಂದ್ರ ಅನುದಾನ ನೀಡುತ್ತಿದೆ. ರಾಜ್ಯ ಸರಕಾರ ಯಾವುದೇ ಅನುದಾನ ನೀಡುವುದಿಲ್ಲ ಎಂದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗೋಪಾಲಯ್ಯ, ಸಂಸ್ಕೃತಿ ಇಲಾಖೆ ಕನ್ನಡ ಅಭಿವೃದ್ಧಿ ದೃಷ್ಟಿಯಿಂದ ಭಾರತೀಯ ಭಾಷಾ ಸಂಸ್ಥಾನಕ್ಕೆ ಸರಕಾರ ಅಗತ್ಯ ನೆರವು ನೀಡಬೇಕು ಎಂದರು. ಇದಕ್ಕೆ ಧ್ವನಿಗೂಡಿಸಿದ ಕಾರಜೋಳ, ಬೆಂ.ನಗರದಲ್ಲಿ ಕೇವಲ ಶೇ.38ರಷ್ಟು ಕನ್ನಡಿಗರಿದ್ದಾರೆಂಬ ಅಂಶ ಬೆಳಕಿಗೆ ಬಂದಿದೆ. ಭವಿಷ್ಯದಲ್ಲಿ ಬೆಂಗಳೂರು ಬೇರೆ ರಾಜ್ಯಕ್ಕೆ ಸೇರುವ ಆತಂಕವಿದೆ. ಆದುದರಿಂದ ಭಾಷೆ ಉಳಿಸಿ-ಬೆಳೆಸಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.





