ಆದೇಶ ಪಾಲಿಸದ 206 ಮದ್ಯದ ಅಂಗಡಿಗಳ ವಿರುದ್ಧ ಪ್ರಕರಣ ದಾಖಲು: ರಾಮಲಿಂಗಾರೆಡ್ಡಿ

ಬೆಂಗಳೂರು, ಫೆ.8: ಸರಕಾರದ ಆದೇಶವನ್ನು ಪಾಲಿಸದ ರಾಜ್ಯದ 206 ಮದ್ಯದ ಅಂಗಡಿಗಳ ಮೇಲೆ ಪ್ರಕರಣ ದಾಖಲಿಸಿ, 158 ಮದ್ಯದ ಅಂಗಡಿಗಳನ್ನು ಮುಚ್ಚಿಸಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಗುರುವಾರ ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಸದಸ್ಯ ಟಿ.ಎ.ಶರವಣ ಪ್ರಶ್ನೋತ್ತರ ವೇಳೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರಿನ ಕಲಾಸಿಪಾಳ್ಯದ ಕೈಲಾಸ್ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಲು ನಿರ್ಲಕ್ಷ ವಹಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹಾಗೂ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಅಲ್ಲದೆ, ಮೂಲಭೂತ ಸೌಲಭ್ಯವಿಲ್ಲದ ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯ 5 ಮದ್ಯದ ಅಂಗಡಿ ಹಾಗೂ 4 ಬಾರ್ ಅಂಡ್ ರೆಸ್ಟೋರೆಂಟ್‌ಗಳ ವಿರುದ್ಧ ಪ್ರಕರಣ ದಾಖಲಿಸಿ, ಕೋರ್ಟ್‌ಗೆ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
Next Story





