ಗಾಂಜಾ ಮಾರಾಟ: ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ಬಂಧನ

ಶಿವಮೊಗ್ಗ, ಫೆ. 8: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ, ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ನಗರದ ವಿನೋಬನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಬಂಧಿತರಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ.
ವಿನೋಬನಗರದ ಡಿವಿಎಸ್ ಕಾಲೇಜು ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಸವಳಂಗ ರಸ್ತೆಯ ನಿವಾಸಿ ಕೌಶೀಫ್ (26) ಹಾಗೂ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ಸುಮನ್ (29) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ನಗರದ ಹೊರವಲಯ ಪಶು ವೈದ್ಯಕೀಯ ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮೂಲತಃ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆ ನಿವಾಸಿ, ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ಪವನ್‍ಕುಮಾರ್ (24) ಎಂಬುವರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.
ಆರೋಪಿಗಳು ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಕುರಿತಂತೆ ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 250 ಗ್ರಾಂ ತೂಕದ ಗಾಂಜಾ ಪೊಟ್ಟಣದ ಪ್ಯಾಕೆಟ್‍ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಬ್ ಇನ್ಸ್‍ಪೆಕ್ಟರ್ ರಾಘವೇಂದ್ರ ಕಾಂಡಿಕೆ ಮತ್ತವರ ಸಿಬ್ಬಂದಿಗಳು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.
ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.







