ಬಸ್ ಢಿಕ್ಕಿ: ಸ್ಕೂಟರ್ ಚಾಲಕ ಮೃತ್ಯು

ಬೆಂಗಳೂರು, ಫೆ. 13: ಶರವೇಗದಲ್ಲಿ ಬಂದ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದು ಸ್ಕೂಟರ್ ಚಾಲನೆ ಮಾಡುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಆತನ ಪತ್ನಿ ಗಾಯಗೊಂಡಿರುವ ಘಟನೆ ಮೈಸೂರು ರಸ್ತೆಯಲ್ಲಿ ನಡೆದಿದೆ ಎನ್ನಲಾಗಿದೆ.
ನಗರದ ವಿಜಯನಗರ ಪೈಪ್‌ಲೈನ್ ನಿವಾಸಿ, ಮುಹಮ್ಮದ್ ಫಾರೂಕ್(31) ಮೃತಪಟ್ಟ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿರುವ ಪತ್ನಿ ಬುಸ್ರುಮಾ(28) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ನಗರದ ಖಾಸಗಿ ಡಯಾಗ್ನೋಸ್ಟಿಕ್ ಕೇಂದ್ರದಲ್ಲಿ ದಂಪತಿಗಳು ಕೆಲಸ ಮಾಡುತ್ತಿದ್ದರು. ಮಂಗಳವಾರ ಬೆಳಗ್ಗೆ 8.30ಗಂಟೆ ಸಮಯದಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ, ಮೈಸೂರು ರಸ್ತೆಯ ಅಗ್ನಿಶಾಮಕ ದಳದ ಕಚೇರಿ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಸ್ಕೂಟರ್‌ಗೆ ಢಿಕ್ಕಿ ಹೊಡೆದು ಘಟನೆ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಮೊಕದ್ದಮೆ ದಾಖಲಿಸಿರುವ ಚಿಕ್ಕಪೇಟೆ ಸಂಚಾರ ಪೊಲೀಸರು ಬಸ್ ಚಾಲಕನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.





