ವರಿಷ್ಠರು ತೀರ್ಮಾನಿಸಿದರೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ: ವಿ.ಸೋಮಣ್ಣ

ಮೈಸೂರು,ಫೆ.18: ಪಕ್ಷದ ವರಿಷ್ಠರು ತೀರ್ಮಾನಿಸಿದರೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲು ಸಿದ್ದ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ವಿ.ಸೋಮಣ್ಣ ಹೇಳಿದರು.
ಖಾಸಗಿ ಹೋಟೆಲ್‍ನಲ್ಲಿ ರವಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಗೋವಿಂದರಾಜ ನಗರ ವಿಧಾನಸಭಾ ಹೊರತು ಪಡಿಸಿ ಹನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂಬುದು ನನ್ನ ಬಯಕೆ. ಆದರೆ ಕಾರ್ಯಕರ್ತರು ನನ್ನನ್ನು ರಾಜ್ಯದ ಇತರೆ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ. ನಾನು ನಿಂತ ನೀರಲ್ಲ, ರಾಜ್ಯದ ಎಲ್ಲಿ ಬೇಕಾದರೂ ಸ್ಪರ್ಧೆ ಮಾಡುವ ಶಕ್ತಿ ನನಗಿದೆ ಎಂದರು.
ಪಕ್ಷದ ವರಿಷ್ಠರು ನನಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಸೂಚಿಸಿದರೆ ಖಂಡಿತ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪಾಪದ ಕೊಡ ತುಂಬಿ ಬಂದಿದೆ. ರಾಜ್ಯದಲ್ಲಿ ಒಂದು ವರ್ಗ ಮತ್ತು ಮತ್ತೊಂದು ವರ್ಗಗಳನ್ನು ಎತ್ತಿಕಟ್ಟಿ ರಾಜಕೀಯ ಮಾಡುತ್ತಿದ್ದಾರೆ. ವೀರಶೈವ ಧರ್ಮವನ್ನು ಎರಡು ಗುಂಪು ಮಾಡಿ ದೊಡ್ಡ ಅಪಚಾರ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.





