ವಿಧಾನಸಭೆಯಲ್ಲಿ ಧನವಿನಿಯೋಗ ವಿಧೇಯಕಕ್ಕೆ ಅಸ್ತು
ಬೆಂಗಳೂರು, ಫೆ.23:ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಕೊನೆಯ ಅಧಿವೇಶನದಲ್ಲಿ ಇಂದು ವಿಪಕ್ಷ ಬಿಜೆಪಿ ಸದಸ್ಯರ ಪ್ರತಿಭಟನೆಯ ನಡುವೆಯೂ ಧನವಿನಿಯೋಗ ವಿಧೇಯಕಕ್ಕೆ ಧ್ವನಿಮತದ ಅಂಗೀಕಾರ ನೀಡಲಾಯಿತು.
ವಿಧಾನಸಭೆಯಲ್ಲಿ ವಿಪಕ್ಷ ಬಿಜೆಪಿ ಸದಸ್ಯರು ಸರಕಾರದ ವಿರುದ್ಧ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಕಾಗದ ಪತ್ರಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದರು. ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮೇಲಿನ ಪ್ರಶ್ನೆಗಳಿಗೆ ಉತ್ತರಿಸುವ ಭಾಷಣದಲ್ಲಿ ಬಿಜೆಪಿಯನ್ನು ಕೆಣಕಿರುವುದು ಬಿಜೆಪಿ ಸದಸ್ಯರ ಕೋಪಕ್ಕೆ ಕಾರಣವಾಗಿತ್ತು.
ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ರಾಜ್ಯ ಸರಕಾರನ್ನು ಸಿದ್ದು ಸರಕಾರ 10 ಪರ್ಸೆಂಟ್ ಕಮಿಷನ್ ಸರಕಾರ ಎಂದು ಟೀಕಿಸಿದ್ದರು. ಇದಕ್ಕೆ ಉತ್ತರವಾಗಿ ಕೇಂದ್ರ ಸರಕಾರ 90 ಪರ್ಸೆಂಟ್ ಕಮಿಷನ್ ಸರಕಾರವೆಂದು ತಿರುಗೇಟು ನೀಡಿದ್ದರು. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಮತ್ತೆ ಅದೇ ವಿಷಯವನ್ನು ಎತ್ತಿರುವುದು ಬಿಜೆಪಿ ಸದಸ್ಯರನ್ನು ಕೆರಳಿಸಿತು ಎನ್ನಲಾಗಿದೆ.
ಬಿಜೆಪಿ ಸದಸ್ಯರ ಪ್ರತಿಭಟನೆಯ ನಡುವೆಯೂ ಹಲವು ವಿಧೇಯಕಗಳಿಗೆ ಸದನದಲ್ಲಿ ಅಂಗೀಕಾರ ನೀಡಲಾಯಿತು.