ಉಡುಪಿ: ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟ

ಉಡುಪಿ, ಮಾ.6: ಮಹಿಳೆಯರ ಆರೋಗ್ಯ, ಮನರಂಜನೆಯ ಅಗತ್ಯವನ್ನು ಮನಸ್ಸಿನಲ್ಲಿರಿಸಿಕೊಂಡು ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಕ್ರೀಡಾಕೂಟ ಆಯೋಜಿಸಿದ್ದು, ಮಹಿಳೆಯರ ಸಕ್ರೀಯ ಪಾಲ್ಗೊಳ್ಳುವಿಕೆ ಅಗತ್ಯವಿದೆ ಎಂದು ಮಹಿಳಾ ಮಂಡಳಗಳ ಒಕ್ಕೂಟದ ಅ್ಯಕ್ಷ ಸರಳ ಕಾಂಚನ್ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಹಾಗೂ ಸ್ತ್ರೀಶಕ್ತಿ ಒಕ್ಕೂಟ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಅವರು ಮತನಾಡಿದರು. ಇದೇ ಸಂದರ್ಭ ಸ್ವೀಪ್ ಚಟುವಟಿಕೆಯಡಿ ಮತದಾನ ಚಲಾಯಿಸುವುದರ ಕುರಿತು ಪ್ರತಿಜ್ಞಾ ವಿಧಿಯನ್ನು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ್ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್, ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಧನಲಕ್ಷ್ಮೀ, ತಾಲೂಕು ಮಟ್ಟದ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಜಯಂತಿ, ಕುಂದಾಪುರ ವಿಭಾಗದ ಸ್ತ್ರೀಶಕ್ತಿ ಒಕ್ಕೂಟ ಅಧ್ಯಕ್ಷೆ ಶೋಭಾ, ಕಾರ್ಕಳ ವಿಭಾಗದ ಅಧ್ಯಕ್ಷೆ ಶ್ರೀಮತಿ ಉಪಸ್ಥಿತರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ ಸ್ವಾಗತಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿರೀಕ್ಷಕರು ವಂದಿಸಿದರು.ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೀರಾ ಕಾರ್ಯಕ್ರಮ ನಿರೂಪಿಸಿದರು.







