ರುದ್ರೇಶ್ ಕೊಲೆ ಪ್ರಕರಣ: ಅಸೀಮ್ ಷರೀಫ್ ಸೇರಿ ಐವರು ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು, ಮಾ.8: ಆರೆಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಅಸೀಮ್ ಷರೀಫ್ ಸೇರಿದಂತೆ ಐವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆರೋಪಿಗಳಾದ ಅಸೀಮ್ ಷರೀಫ್, ಇರ್ಫಾನ್ ಪಾಷಾ, ವಾಸೀಂ ಅಹಮದ್, ಮೊಹಮ್ಮದ್ ಸಾದಿಕ್ ಹಾಗೂ ಮೊಹಮ್ಮದ್ ಮುಜೀದ್ ಉಲ್ಲಾ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಅರ್ಜಿಗಳನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹಾಗೂ ನ್ಯಾಯಮೂರ್ತಿ ಕೆ.ಎಸ್.ಮುದಗಲ್ ಅವರಿದ್ದ ಪೀಠ, ಎನ್‌ಐಎ ಕಾಯ್ದೆಯ ಸೆಕ್ಷನ್ 21ರ ಪ್ರಕಾರ, ಆರೋಪಿಗಳ ವಿರುದ್ಧದ ಆರೋಪಗಳನ್ನು ಕೈಬಿಡಲು ನಿರಾಕರಿಸಿರುವ ಎನ್‌ಐಎ ವಿಶೇಷ ನ್ಯಾಯಾಲಯದ ಆದೇಶವನ್ನು ಮೇಲ್ಮನವಿಯಲ್ಲಿ ಪ್ರಶ್ನಿಸಲು ಅವಕಾಶವಿಲ್ಲ. ಹೀಗಾಗಿ ಅರ್ಜಿಯು ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಮೇಲ್ಮನವಿ ವಜಾಗೊಳಿಸಿತು.
ಆರೆಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ತನಿಖಾಧಿಕಾರಿಗಳು ಎಲ್ಲ ಐವರೂ ಆರೋಪಿಗಳ ವಿರುದ್ಧ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಇದೇ ವೇಳೆ ತಮ್ಮ ವಿರುದ್ಧದ ಆರೋಪಗಳನ್ನು ಕೈ ಬಿಡುವಂತೆ ಕೋರಿ ಆರೋಪಿಗಳು ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ, ಪ್ರಕರಣದ ಸಂಬಂಧ ಆರೋಪಿಗಳ ತನಿಖಾಧಿಕಾರಿಗಳು ಸಾಕಷ್ಟು ಸಾಕ್ಷ್ಯ ಕಲೆ ಹಾಕಿದ್ದು, ಪ್ರಕರಣದಲ್ಲಿ ಅವರ ಕೈವಾಡವಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ತಿಳಿಸಿ, 2018ರ ಫೆ.1ರಂದು ಆರೋಪಿಗಳ ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.







