ಸರಿಯಾಗಿ ಕೆಲಸ ಮಾಡಿ - ಇಲ್ಲವೇ ರಾಜೀನಾಮೆ ನೀಡಿ: ಕೆ.ಸಿ.ವೇಣುಗೋಪಾಲ್

ಬೆಂಗಳೂರು, ಮಾ.9: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು, ಇಲ್ಲವೇ ಹೊಸಬರಿಗೆ ಅವಕಾಶ ಕಲ್ಪಿಸಲು ರಾಜೀನಾಮೆ ನೀಡಿ ನಿರ್ಗಮಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಖಡಕ್ ಸೂಚನೆ ನೀಡಿದ್ದಾರೆ.
ಶುಕ್ರವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಜಿಲ್ಲಾ ಅಧ್ಯಕ್ಷ ಹಾಗೂ ಪದಾಧಿಕಾರಿಗಳೊಂದಿಗೆ ನಡೆಸಿದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಪದಾಧಿಕಾರಿಗಳ ಕಾರ್ಯವೈಖರಿ ಬಗ್ಗೆ ಜಿಲ್ಲಾಧ್ಯಕ್ಷರಿಂದ ಮಾಹಿತಿ ಪಡೆಯಲಾಗಿದೆ. ಸರಿಯಾಗಿ ಕೆಲಸ ಮಾಡಿ, ಇಲ್ಲದಿದ್ದರೆ ರಾಜೀನಾಮೆ ನೀಡಿ ಎಂದು ಕೆಲ ಪದಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೆ, ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿರುವ ಕಾಂಗ್ರೆಸ್ ಪದಾಧಿಕಾರಿಗಳು ಪಕ್ಷ ಸಂಘಟನೆಗೆ ಗಮನ ನೀಡಲು ಸಾಧ್ಯವಾಗುವುದಿಲ್ಲ. ಆದುದರಿಂದ, ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿ, ಕ್ಷೇತ್ರಗಳತ್ತ ಗಮನ ಹರಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಚುನಾವಣಾ ಸಂದರ್ಭದಲ್ಲಿ ಪದಾಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಬಿಜೆಪಿಯವರು ನಮ್ಮ ವಿರುದ್ಧ ಮಾಡುತ್ತಿರುವ ಅಪಪ್ರಚಾರದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು. ಬೂತ್‌ಮಟ್ಟದಲ್ಲಿ ಈ ಕೆಲಸ ಸಕ್ರಿಯವಾಗಬೇಕು ಎಂದು ವೇಣುಗೋಪಾಲ್ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಮಾ.20,21ರಂದು ಕರಾವಳಿ ಭಾಗದಲ್ಲಿ ಹಾಗೂ ಮಾ.24 ಹಾಗೂ 25ರಂದು ಮೈಸೂರು ಭಾಗದಲ್ಲಿ ಹಮ್ಮಿಕೊಳ್ಳಲಿರುವ ಜನಾಶೀರ್ವಾದ ಯಾತ್ರೆಯನ್ನು ಯಶಸ್ವಿಗೊಳಿಸುವ ಸಂಬಂಧವು ಸಭೆಯಲ್ಲಿ ಚರ್ಚೆಗಳು ನಡೆದಿದ್ದು, ಈ ಸಂಬಂಧ ಕೈಗೊಳ್ಳಬೇಕಿರುವ ಸಿದ್ಧತೆಗಳ ಕುರಿತು ಪದಾಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ವೇಣುಗೋಪಾಲ್ ನೀಡಿದ್ದಾರೆ.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷರಾದ ದಿನೇಶ್‌ಗುಂಡೂರಾವ್, ಎಸ್.ಆರ್.ಪಾಟೀಲ್ ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.







