ಚಿಕ್ಕಮಗಳೂರು : ಎಸೆಸೆಲ್ಸಿ ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು, ಮಾ.9: ಎಸೆಸೆಲ್ಸಿ ಪರೀಕ್ಷೆಯನ್ನು ಯಾವುದೇ ನ್ಯೂನ್ಯತೆಗಳಿಲ್ಲದೆ, ಅಹಿತಕರ ಘಟನೆಗಳಿಗೆ ಆಸ್ಪದನೀಡದೆ ವ್ಯವಸ್ಥಿತವಾಗಿ ನಡೆಸುವಂತೆ ಪರೀಕ್ಷಾ ಕೇಂದ್ರಗಳಿಗೆ ನೇಮಿಸಲಾದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಸೂಚಿಸಿದರು.
ಮಾರ್ಚ್ 23 ರಿಂದ ಏಪ್ರಿಲ್ 6 ರ ವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಸುವ ಸಂಬಂಧ ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈ ಬಾರಿ 58 ಪರೀಕ್ಷಾಕೇಂದ್ರಗಳಲ್ಲಿ 14,593 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ತೊಡಕಾಗದಂತೆ ಅಧಿಕಾರಿಗಳು, ಶಾಲಾ ಮುಖ್ಯೋಪಾದ್ಯಾಯರು, ಕೊಠಡಿ ಮೇಲ್ವಿಚಾರಕರು ಹಾಗೂ ಪರೀಕ್ಷೆಗೆ ನೇಮಿಸಲಾದ ಸಿಬ್ಬಂಧಿಗಳು ಕ್ರಮಕೈಗೊಳ್ಳಬೇಕೆಂದು ಹೇಳಿದರು.
ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರದ ಸಮೀಪವಿರುವ ಜೆರಾಕ್ಸ್ ಸೆಂಟರ್‍ಗಳನ್ನು ತೆರೆಯದಂತೆ ಕ್ರಮ ಕೈಗೊಳ್ಳಬೇಕು. ಪರೀಕ್ಷೆ ನಡೆಯುವ ಕೇಂದ್ರದಲ್ಲಿ ಜೆರಾಕ್ಸ್ ಮತ್ತು ಪ್ರಿಂಟಿಂಗ್ ಯಂತ್ರ ಕಾರ್ಯ ನಿರ್ವಹಿಸದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ, ಇತ್ಯಾದಿ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ವಿದ್ಯಾರ್ಥಿಗಳು ತಮ್ಮೊಂದಿಗೆ ತಂದಿರಬಹುದಾದ ಬ್ಯಾಗ್, ಇತ್ಯಾದಿ ವಸ್ತುಗಳನ್ನು ನಿಗದಿತ ಕೊಠಡಿಯೊಳಗೆ ಇರಿಸಲು ಟೋಕನ್ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.
ಪರೀಕ್ಷಾ ಕೊಠಡಿಯೊಳಗೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಸಿ.ಸಿ ಟಿವಿ ಅಳವಡಿಕೆ ಕಡ್ಡಾಯವಾಗಿದೆ. ಪರೀಕ್ಷೆ ನಡೆಯುವ ದಿನಗಳಲ್ಲಿ ಪರೀಕ್ಷಾ ಕೇಂದ್ರದ ಸಮೀಪ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿರುತ್ತದೆ ಎಂದು ತಿಳಿಸಿದರು.
ಕೊಠಡಿ ಮೇಲ್ವಿಚಾರಕರು ತಮ್ಮೊಂದಿಗೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ. ಪರೀಕ್ಷಾ ನಿಯಮಾವಳಿಗಳ ಕುರಿತು ಮುಂಚಿತವಾಗಿ ಮೇಲ್ವಿಚಾರಕರಿಗೆ ತರಬೇತಿ ನೀಡಬೇಕು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ನಿಗಧಿಪಡಿಸಿದ ಸಮಯಕ್ಕೆ ತಲುಪುವಂತೆ ಶಾಲಾ ಮುಖ್ಯೋಪಾಧ್ಯಾಯರು ಗಮನಹರಿಸಬೇಕು. ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭವಾದ ಸಮಯದಲ್ಲಿ ಅನಿವಾರ್ಯ ಕಾರಣದಿಂದಾಗಿ 5 ರಿಂದ 10 ನಿಮಿಷಗಳು ತಡವಾಗಿ ಬಂದರೆ ನಿಯಮಾನುಸಾರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರಸನ್ನಕುಮಾರ್ ಸೇರಿದಂತೆ ಮತ್ತಿತರ ಅಧಿಕಾರಿಗಳು, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.







