ಕಾಂಗ್ರೆಸ್ ನಿಂದ ಮತದಾರರ ಪಟ್ಟಿಗೆ ಬಾಂಗ್ಲಾ ವಲಸಿಗರ ಸೇರ್ಪಡೆ: ಅರವಿಂದ ಲಿಂಬಾವಳಿ ಆರೋಪ

ಬೆಂಗಳೂರು, ಮಾ. 11: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಭೀತಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಾಂಗ್ಲಾ ವಲಸಿಗರನ್ನು ಮತದಾರರ ಪಟ್ಟಿಗೆ ಸೇರಿಸಲು ಮುಂದಾಗಿದೆ ಎಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ಇಂದಿಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
ರವಿವಾರ ಇಲ್ಲಿನ ಮಹದೇವಪುರ ಕ್ಷೇತ್ರದಲ್ಲಿ ಪಕ್ಷದಿಂದ ಏರ್ಪಡಿಸಿದ್ದ ‘ಬೆಂಗಳೂರು ರಕ್ಷಿಸಿ’ ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಹದೇವಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಿಲ್ಲವೆಂಬುದು ಅವರಿಗೆ ಮನವರಿಕೆಯಾಗಿದೆ. ಹೀಗಾಗಿ ಅಡ್ಡ ದಾರಿ ಹಿಡಿದಿದ್ದು, ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿದರು.
ವಲಸಿಗರನ್ನು ಮುಂದಿಟ್ಟುಕೊಂಡು ಗೆಲ್ಲಲು ಮುಂದಾಗಿದ್ದ ಕಾಂಗ್ರೆಸ್ ಹುನ್ನಾರವನ್ನು ನಮ್ಮ ಕಾರ್ಯಕರ್ತರು ಪತ್ತೆಹಚ್ಚಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂದ ಅವರು, ಸಿಎಂ ಸಿದ್ದರಾಮಯ್ಯ ಬ್ರಿಟಿಷರಂತೆ ಸಮಾಜದಲ್ಲಿ ಧರ್ಮ ಹಾಗೂ ಜಾತಿಗಳನ್ನು ಒಡೆದು ಆಳುವುದರಲ್ಲಿ ನಿಸ್ಸೀಮರು ಎಂದು ಟೀಕಿಸಿದರು.
ತಾನು ಸಮಾಜವಾದಿ, ಜಾತ್ಯತೀತತೆ ಪ್ರತಿಪಾದಿಸುತ್ತೇನೆ ಎನ್ನುತ್ತಲೇ ಸಮಾಜವನ್ನು ವಿಭಜಿಸುವುದನ್ನು ಸಿಎಂ ಕರಗತ ಮಾಡಿಕೊಂಡಿದ್ದಾರೆಂದು ದೂರಿದ ಲಿಂಬಾವಳಿ, ಲಿಂಗಾಯಿತ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡುವ ನೆಪದಲ್ಲಿ ಆ ಸಮುದಾಯಕ್ಕೆ ಬೆಂಕಿ ಇಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮಹದೇವಪುರ ಕ್ಷೇತ್ರದ ಅಭಿವೃದ್ಧಿಗೆ ಸರಕಾರ ಅಡ್ಡಗಾಲು ಹಾಕುತ್ತಿದೆ. ಬಿಜೆಪಿ ಅವಧಿಯಲ್ಲಿ ಮಂಜೂರಾಗಿದ್ದ ಕಾಮಗಾರಿಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಈ ಕ್ಷೇತ್ರಕ್ಕೆ ನಯಾ ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದರು.
ಮಾಜಿ ಡಿಸಿಎಂ ಆರ್.ಅಶೋಕ್ ಮಾತನಾಡಿ, ಬೆಂಗಳೂರಿನಲ್ಲಿ ಕೈಗೊಂಡಿರುವ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೂ ಹಣಲೂಟಿ ಮಾಡಲು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲು ಮುಂದಾಗಿದ್ದಾರೆ. ಇಂತಹ ಗಿಮಿಕ್ ಅನ್ನು ಜನತೆ ನಂಬುವುದಿಲ್ಲ ಎಂದು ಲೇವಡಿ ಮಾಡಿದರು.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಂಸದ ಪಿ.ಸಿ.ಮೋಹನ್, ಬಿಬಿಎಂಪಿ ಸದಸ್ಯರಾದ ಎನ್.ಮುನಿಸ್ವಾಮಿ, ಪುಷ್ಪಮಂಜುನಾಥ್, ಆಶಾ ಸುರೇಶ್, ಶ್ವೇತಾ ವಿಜಯ್ಕುಮಾರ್, ಪಕ್ಷದ ಸಹ ವಕ್ತಾರ ಎ.ಎಚ್.ಆನಂದ್ ಸೇರಿದಂತೆ ಇನ್ನಿತರ ಮುಖಂಡರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.







