ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ವಿ.ವಿ.ಆರಂಭ: ಕೇಂದ್ರ ಸಚಿವ ಅನಂತಕುಮಾರ್

ಬೆಂಗಳೂರು, ಮಾ. 11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ‘ಗಾರ್ಮೆಂಟ್ಸ್ ವಿಶ್ವ ವಿದ್ಯಾಲಯ’ವನ್ನು ಆರಂಭಿಸಲು ಕೇಂದ್ರ ಸರಕಾರ ನಿರ್ಧರಿಸಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ತಿಳಿಸಿದ್ದಾರೆ.
ರವಿವಾರ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಿದ್ದ ಉಡುಪು ಕಾರ್ಖಾನೆಗಳು ಹೆಚ್ಚಿರುವ ಬೊಮ್ಮನಹಳ್ಳಿ ಕ್ಷೇತ್ರ ವ್ಯಾಪ್ತಿಯಲ್ಲಿ ಗಾರ್ಮೆಂಟ್ಸ್ ವಿಶ್ವ ವಿದ್ಯಾಲಯವನ್ನು ಆರಂಭಿಸಲು ಕೇಂದ್ರ ಜವಳಿ ಖಾತೆ ಸಚಿವೆ ಸ್ಮತಿ ಇರಾನಿ ಸಮ್ಮತಿ ಸೂಚಿಸಿದ್ದಾರೆಂದು ಹೇಳಿದರು.
ನನ್ನನ್ನು ಆಯ್ಕೆ ಮಾಡಿ ಲೋಕಸಭೆಗೆ ಕಳುಹಿಸಿ, ಕೇಂದ್ರ ಸರಕಾರದಲ್ಲಿ ಮಂತ್ರಿಯಾಗಲು ಕಾರಣರಾಗಿರುವ ಎಲ್ಲ ಮತದಾರರ ಸೇವೆಯನ್ನು ಕೊನೆ ಉಸಿರು ಇರುವವರೆಗೆ ಮಾಡುತ್ತೇನೆ ಎಂದ ಅವರು, ಕಾಂಗ್ರೆಸ್ ಮುಕ್ತ ಭಾರತ ಆಗಬೇಕೆಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ಮುಕ್ತ ಬೊಮ್ಮನಹಳ್ಳಿ ಆಗಬೇಕು ಎಂದರು.
ಸತೀಶ್‌ರೆಡ್ಡಿ ಇಟಲಿಯಲ್ಲಿ ಹುಟ್ಟಿಲ್ಲ. ಬೊಮ್ಮನಹಳ್ಳಿಯಲ್ಲಿ ಹುಟ್ಟಿ ಬೆಳೆದವರು. ದೇಶದಲ್ಲಿ ವಂಶಪಾರಂಪರ್ಯ ಆಡಳಿತ ಬೇಡ. ಥಾಯ್ಲೆಂಡಿಗೆ ಧ್ಯಾನ ಮಾಡಲು ಹೋಗಿದ್ದೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಆದರೆ, ಥಾಯ್ಲೆಂಡ್, ಸಿಂಗಾಪೂರಕ್ಕೆ ಹೋಗುವುದು ಮಜಾ ಮಾಡಿ ಬರಲು ಎಂದು ಅನಂತಕುಮಾರ್ ವ್ಯಂಗ್ಯವಾಡಿದರು.
ಕೇಂದ್ರ ಜವಳಿ ಖಾತೆ ಸಚಿವೆ ಸ್ಮತಿ ಇರಾನಿ ಮಾತನಾಡಿ, ಕರ್ನಾಟಕದಲ್ಲಿ ಪೊಲೀಸರ ಹೆಂಡತಿಗೇ ರಕ್ಷಣೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಎಲ್ಲರೂ ತಲೆ ತಗ್ಗಿಸುವಂತಹ ವಿಚಾರವಾಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದರು.
ಮಹಿಳೆಯರನ್ನು ಗೌರವಿಸುವುದು ನಮ್ಮ ಬಿಜೆಪಿಯ ಸಂಸ್ಕಾರ. ಗುಜರಾತ್ ಚುನಾವಣೆ ವೇಳೆ ಕಾಂಗ್ರೆಸ್ ಶಾಸಕರು ಬೆಂಗಳೂರಿನ ರೆಸಾರ್ಟ್‌ನಲ್ಲಿ ಬಂದು ಮೋಜು ಮಾಡಿದ್ದರು. ಅಲ್ಲಿ ಗುಜರಾತಿನಲ್ಲಿ ನಮ್ಮ ಕಾರ್ಯಕರ್ತರು ಹಳ್ಳಿ -ಹಳ್ಳಿಗಳಿಗೆ ಹೋಗಿ ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿದರು ಎಂದರು.
ಮಾಜಿ ಡಿಸಿಎಂ ಆರ್.ಅಶೋಕ್, ಶಾಸಕ ಸತೀಶ್ ರೆಡ್ಡಿ, ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.







