ಬ್ರಿಟಿಷ್, ಮೊಗಲರ ಕುಲದಂತೆ ವರ್ತಿಸುವ ಸಿಎಂ: ಸುನೀಲ್ ಕುಮಾರ್

ಹಿರಿಯಡ್ಕ, ಮಾ.12: ಜಾತಿ, ಧರ್ಮ, ಸಮುದಾಯದ ನಡುವೆ ವೈಮನಸ್ಸು ಸೃಷ್ಟಿಸಿ ಸಮಾಜವನ್ನು ಛಿದ್ರವಾಗಿಸುವ ಮೂಲಕ ಒಡೆದು ಆಳುವ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರಿಟಿಷ್, ಮೊಗಲರ ಕುಲ ದಲ್ಲಿ ಹುಟ್ಟಿದಂತೆ ವರ್ತಿಸುತ್ತಿದ್ದಾರೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಟೀಕಿಸಿದ್ದಾರೆ.
ಕಾಪು ವಿಧಾನ ಸಭಾ ಕ್ಷೇತ್ರದ ನವ ಕರ್ನಾಟಕ ನಿರ್ಮಾಣಕ್ಕಾಗಿ ಬಿಜೆಪಿ ವತಿಯಿಂದ ಹಿರಿಯಡ್ಕ ಗಾಂಧಿ ಮೈದಾನದಲ್ಲಿ ರವಿವಾರ ನಡೆದ ನವಶಕ್ತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ. ಇವರು ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಸಾಲದ ಹೊರೆ ಹೆಚ್ಚಾಗಿದೆ. ಬಜೆಟ್ ನಲ್ಲಿ ಘೋಷಣೆಯಾಗಿರುವ ಯಾವುದೇ ಯೋಜನೆಗಳು ಅನುಷ್ಠಾನಕ್ಕೆ ಬಂದಿಲ್ಲ. ಆಡಳಿತದಲ್ಲಿ ಶಿಸ್ತು, ಸ್ವಚ್ಛತೆ, ಪಾರದರ್ಶಕತೆ ಇಲ್ಲ ಎಂದು ಅವರು ಆರೋಪಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್, ಜಿಪಂ ಅಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಯಶ್‌ಪಾಲ್ ಸುವರ್ಣ, ಕುಯಿಲಾಡಿ ಸುರೇಶ್ ನಾಯಕ್, ಕುತ್ಯಾರು ನವೀನ್ ಶೆಟ್ಟಿ, ಮುರುಳೀಧರ್ ಪೈ, ಜಿತೇಂದ್ರ ಶೆಟ್ಟಿ, ನಯನಾ ಗಣೇಶ್, ಸದಾಶಿವ ಶೆಟ್ಟಿ, ಶೀಲಾ ಕೆ.ಶೆಟ್ಟಿ ಉಪಸ್ಥಿತರಿದ್ದರು.
ಕ್ಷೇತ್ರದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಸ್ವಾಗತಿಸಿದರು. ಶ್ಯಾಮಲ್ ಕುಂದರ್ ಕಾರ್ಯಕ್ರಮ ನಿರೂಪಿಸಿದರು.







