7 ಬಂಡಾಯ ಶಾಸಕರ ಅನರ್ಹತೆ ಪ್ರಕರಣ: ಸ್ಪೀಕರ್ ಕೋಳಿವಾಡ್ ಗೆ ಹೈಕೋರ್ಟ್ ತುರ್ತು ನೋಟಿಸ್

ಬೆಂಗಳೂರು, ಮಾ.21: ರಾಜ್ಯಸಭೆ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಪಕ್ಷದ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದ ಜೆಡಿಎಸ್‌ನ 7 ಬಂಡಾಯ ಶಾಸಕರನ್ನು ಅನರ್ಹಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಮಾ.22ರ ಗುರುವಾರ ನ್ಯಾಯಾಲಯಕ್ಕೆ ತಮ್ಮ ನಿಲುವು ತಿಳಿಸುವಂತೆ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ್‌ಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ.
ಜೆಡಿಎಸ್ ಶಾಸಕರಾದ ಸಿ.ಎನ್.ಬಾಲಕೃಷ್ಣ, ಬಿ.ಬಿ.ನಿಂಗಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಘವೇಂದ್ರ ಎಸ್. ಚವ್ಹಾಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸ್ಪೀಕರ್‌ಗೆ ತುರ್ತು ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮಾ.22ಕ್ಕೆ ಮುಂದೂಡಿತು.
ವಿಧಾನಸಭೆ ಸ್ಪೀಕರ್ ಕೆ.ಬಿ.ಕೋಳಿವಾಡ ಅವರು ತಮ್ಮ ನಿಲುವನ್ನು ಮುಚ್ಚಿದ ಲಕೋಟೆಯಲ್ಲಿ ಅಡ್ವೋಕೇಟ್ ಜನರಲ್ ಮಧುಸೂದನ್ ನಾಯಕ್ ಅವರ ಮೂಲಕ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದರು.
ಏಳು ಬಂಡಾಯ ಶಾಸಕರ ಪರವಾಗಿ ವಾದಿಸಿದ ಹಿರಿಯ ವಕೀಲ ರಾಘವನ್ ಅವರು, ರಾಜ್ಯಸಭೆ ಚುನಾವಣೆಯ ಅಧಿಸೂಚನೆ ಪ್ರಕಟವಾದ ಬಳಿಕ ಅನರ್ಹತೆಗೆ ಅರ್ಜಿ ಸಲ್ಲಿಸಿರುವುದು ಸರಿಯಲ್ಲ, ಇದು ಕಾನೂನು ಬಾಹಿರ ಎಂದು ಪೀಠಕ್ಕೆ ತಿಳಿಸಿದರು. ಹಿರಿಯ ವಕೀಲ ರವಿ ವರ್ಮಕುಮಾರ್ ಅವರು ಸರಕಾರದ ಪರವಾಗಿ ವಾದ ಮಂಡಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು ಮಾ.22ರಂದು ಸ್ಪೀಕರ್ ಕೋಳಿವಾಡ್ ಅವರು ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ತಿಳಿಸದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿತು.







