ಹಾಲಿ ಶಾಸಕರು ಸೋತರೆ ಜಿಲ್ಲಾ ಉಸ್ತುವಾರಿ ಸಚಿವರೆ ಹೊಣೆ: ಮುಖ್ಯಮಂತ್ರಿ ಖಡಕ್ ಎಚ್ಚರಿಕೆ

ಬೆಂಗಳೂರು, ಮಾ.28: ಆಡಳಿತಾರೂಢ ಕಾಂಗ್ರೆಸ್ ಪಾಲಿಗೆ ಈ ವಿಧಾನಸಭಾ ಚುನಾವಣೆಯು ಪ್ರತಿಷ್ಠೆಯ ಕಣವಾಗಿದ್ದು, ಹಾಲಿ ಶಾಸಕರು ಸೋಲನುಭವಿಸಿದರೆ, ಅದಕ್ಕೆ ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನೆ ಹೊಣೆಗಾರರನ್ನಾಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬುಧವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ.
ಯಾರೊಬ್ಬರೂ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡುವಂತಿಲ್ಲ. ಖಾಸಗಿ ಕಾರಿನಲ್ಲೆ ಸಂಚರಿಸಬೇಕು, ಜಿಲ್ಲೆಗಳಲ್ಲಿ ಚುನಾವಣಾ ಅಧಿಕಾರಿಗಳ ಮೇಲೆ ಯಾವುದೆ ರೀತಿಯ ಒತ್ತಡವನ್ನು ಹೇರಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
ನಮ್ಮ ಶಾಸಕರು ಇರುವ ಕ್ಷೇತ್ರಗಳಲ್ಲಿ ಹೆಚ್ಚು ಪ್ರವಾಸ ಮಾಡಬೇಕು. ಜಿಲ್ಲಾವಾರು ಇಂತಿಷ್ಟು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕು ಎಂದು ಸಚಿವರಿಗೆ ಗುರಿ ನಿಗದಿಪಡಿಸಿದ ಮುಖ್ಯಮಂತ್ರಿ, ಈ ಬಾರಿ ಹಾಲಿ ಶಾಸಕರು ಸೋತರೆ ಅದಕ್ಕೆ ನೀವೆ ಹೊಣೆಗಾರರಾಗುತ್ತೀರ, ರಾಜ್ಯದಲ್ಲಿ ಎಲ್ಲಿಯೂ ಆಡಳಿತ ವಿರೋಧಿ ಅಲೆ ಇಲ್ಲ. ಈ ವಾತಾವರಣವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ತಾಕೀತು ಮಾಡಿದ್ದಾರೆ.
ಸಭೆಯಲ್ಲಿ ಎಲ್ಲ ಜಿಲ್ಲೆಗಳ ರಾಜಕೀಯ ಪರಿಸ್ಥಿತಿ ಕುರಿತು ಉಭಯ ನಾಯಕರು ಮಾಹಿತಿಯನ್ನು ಪಡೆದರು. ಹಾಲಿ ಶಾಸಕರು ಇರುವ ಕ್ಷೇತ್ರಗಳಲ್ಲಿ ಅವರಿಗೆ ಟಿಕೆಟ್ ಕೊಡುವಂತೆ ಹೈಕಮಾಂಡ್‌ಗೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ. ಇನ್ನುಳಿದ ಕ್ಷೇತ್ರಗಳಲ್ಲಿ ತಲಾ ಇಬ್ಬರು ಆಕಾಂಕ್ಷಿಗಳ ಹೆಸರನ್ನು ಕಳುಹಿಸಲು ತೀರ್ಮಾನಿಸಲಾಗಿದೆ. ಇನ್ನುಳಿದಂತೆ ಹೆಚ್ಚು ಪೈಪೋಟಿ ಇರುವ ಕ್ಷೇತ್ರಗಳಲ್ಲಿ ಮೂವರು ಆಕಾಂಕ್ಷಿಗಳ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸ್ಸು ಮಾಡಲು ಸಭೆಯಲ್ಲಿ ಚರ್ಚಿಸಲಾಗಿದೆ.
ಪ್ರಿಯಾಂಕ್ ಖರ್ಗೆ ಕ್ಷೇತ್ರ ಬದಲಾವಣೆ?: ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ, ಈ ಬಾರಿ ಚಿತ್ತಾಪುರ ಬದಲು ಕಲಬುರಗಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಕಲಬುರಗಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಹಾಲಿ ಶಾಸಕ ಜಿ.ರಾಮಕೃಷ್ಣ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರ ಬದಲಾವಣೆಗೆ ಪ್ರಿಯಾಂಕ್ ಖರ್ಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದ್ದು, ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹೈಕಮಾಂಡ್ ಗಮನಕ್ಕೂ ತಂದಿದ್ದಾರೆ ಎಂದು ಹೇಳಲಾಗಿದೆ.
ಎಪ್ರಿಲ್ 15ರೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ರಾಜ್ಯದ 224 ಕ್ಷೇತ್ರಗಳ ಟಿಕೆಟ್ ಅಂತಿಮಗೊಳಿಸುವ ಸಂಬಂಧ ಇವತ್ತು ಇಡೀ ದಿನ ಜಿಲ್ಲಾ ಉಸ್ತುವಾರಿ ಸಚಿವರು ಹಾಗು ಜಿಲ್ಲಾಧ್ಯಕ್ಷರ ಜೊತೆ ಸಭೆ ಮಾಡಿ, ಆಯಾ ಕ್ಷೇತ್ರಗಳ ಸ್ಥಿತಿಗತಿ ಬಗ್ಗೆ ಅವರಿಂದ ಮಾಹಿತಿ ಪಡೆದು, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದರು.
ಎಪ್ರಿಲ್ 9 ಹಾಗೂ 10ರಂದು ನಡೆಯಲಿರುವ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆಸಿ, ಕೇಂದ್ರ ಚುನಾವಣಾ ಸಮಿತಿಯಲ್ಲಿ ಯಾರಿಗೆ ಟಿಕೆಟ್ ನೀಡಬೇಕೆಂಬುದನ್ನು ಅಂತಿಮಗೊಳಿಸಲಿದ್ದೇವೆ ಎಂದು ಅವರು ತಿಳಿಸಿದರು.
ಎಪ್ರಿಲ್ 15ರೊಳಗೆ 224 ಕ್ಷೇತ್ರದ ಪಟ್ಟಿ ಘೋಷಣೆ ಮಾಡತ್ತೇವೆ. ಅಶೋಕ್ ಖೇಣಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾರೊಬ್ಬರೂ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಅವರು, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು 40 ಜನರ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಸಿದ್ಧ ಮಾಡುತ್ತಿದ್ದೇವೆ ಎಂದರು.
ಕೆಪಿಸಿಸಿ ಕಚೇರಿಯಲ್ಲಿ ಪ್ರಮೋದ್ ಮಧ್ವರಾಜ್: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಬಿಂಬಿಸಲ್ಪಡುತ್ತಿದ್ದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದರು.
ಸಿಎಂ-ಪರಮೇಶ್ವರ್‌ಗೆ ಸ್ಪಷ್ಟನೆ : ಬಿಜೆಪಿ ಸೇರ್ಪಡೆಯಾಗಲಿದ್ದೇನೆ ಎಂಬುದು ಸತ್ಯಕ್ಕೆ ದೂರವಾದದ್ದು, ನಾನು ಕಾಂಗ್ರೆಸ್‌ನಲ್ಲೆ ಇದ್ದೇನೆ, ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ಗೆ ಪ್ರಮೋದ್ ಮಧ್ವರಾಜ್ ಸ್ಪಷ್ಟಣೆ ನೀಡಿದರು.







