ಸಿಬಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ : ಕೇಂದ್ರ ಸಚಿವ ಜಾವಡೇಕರ್ ವಿರುದ್ಧ ಪ್ರತಿಭಟನೆ

ಬೆಂಗಳೂರು, ಮಾ.31: ಸಿಬಿಎಸ್ಪಿ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ರಾಜ್ಯ ಎನ್‌ಎಸ್‌ಯುಐ ಕಾರ್ಯಕರ್ತರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ವಿರುದ್ಧ ಪ್ರತಿಭಟನೆ ನಡೆಸಿದರು.
ಶನಿವಾರ ಸಂಜೆ ನಗರದ ವೌರ್ಯ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರಕಾಶ್ ಜಾವಡೇಕರ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಮುಂದಾದ ಎನ್‌ಎಸ್‌ಯುಐ ಕಾರ್ಯಕರ್ತರಿಗೆ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪೊಲೀಸರು ಅಡ್ಡಿಪಡಿಸಿದರು.
ಆನಂತರ ಕಾಂಗ್ರೆಸ್ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರು, ಕೇಂದ್ರ ಸರಕಾರವು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಬಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ 22 ಲಕ್ಷ ವಿದ್ಯಾರ್ಥಿಗಳ ಜೀವನ ಹಾಳಾಗಿದೆ. ಬಿಜೆಪಿಯಿಂದಲೆ ಪ್ರಶ್ನೆ ಪತ್ರಿಕೆ ಮಾರಾಟವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಜಾವಡೇಕರ್ ಕೂಡಲೆ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿ ಶ್ರೀಧರ ಆಗ್ರಹಿಸಿದರು.





