ಡಾ.ಯತೀಂದ್ರಗೆ ವೈದ್ಯಕೀಯ ಸಂಘದ ಬೆಂಬಲ
ಬೆಂಗಳೂರು, ಮಾ.31: ಮುಂಬರುವ ವಿಧಾಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಡಾ.ಯತೀಂದ್ರಗೆ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.
ಶನಿವಾರ ಭಾರತೀಯ ವೈದ್ಯಕೀಯ ಸಂಘದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಡಾ.ಎಚ್.ಎನ್.ರವೀಂದ್ರ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಡಾ.ಯತೀಂದ್ರ ಸ್ಪರ್ಧಿಸುತ್ತಿರುವುದು ಸಂತೋಷದ ವಿಚಾರ. ಭಾರತೀಯ ವೈದ್ಯಕೀಯ ಸಂಘ(ಐಎಂಎ) ವತಿಯಿಂದ ಸಂಪೂರ್ಣ ಬೆಂಬಲ ನೀಡಲಾಗುವುದೆಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರನೆಂದು ಯತೀಂದ್ರಗೆ ಬೆಂಬಲ ನೀಡುತ್ತಿಲ್ಲ. ಅವರು ವೈದ್ಯರೆಂಬ ಕಾರಣದಿಂದ ಬೆಂಬಲ ಸೂಚಿಸಲಾಗುತ್ತಿದೆ. ಇವರು ಸ್ಪರ್ಧಿಸುವ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕಾರ್ಯ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ನಮ್ಮ ಸಂಘವು ಪಕ್ಷಾತೀತವಾಗಿದ್ದು, ರಾಜ್ಯದ ಎಲ್ಲ ರಾಜಕೀಯ ಪಕ್ಷಗಳಿಂದಲೂ ಸುಮಾರು 30ಕ್ಕೂ ಹೆಚ್ಚು ವೈದ್ಯರು ಸ್ಪರ್ಧಿಸುತ್ತಿದ್ದಾರೆ. ಚುನಾವಣೆಯಲ್ಲಿ ವೈದ್ಯರು ಗೆಲುವು ಸಾಧಿಸಿ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗುವುದು ನಮ್ಮ ಉದ್ದೇಶವಾಗಿದೆ. ಹೀಗಾಗಿ, ನಮ್ಮ ಸಂಘದ ಬೇಡಿಕೆಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಅಳವಡಿಸಿಕೊಳ್ಳುವ ಪಕ್ಷಕ್ಕೆ ಬೆಂಬಲ ನೀಡುತ್ತೇವೆ. ಹೀಗಾಗಿ, ಎಲ್ಲ ರಾಜಕೀಯ ಪಕ್ಷಗಳು ಚುನಾವಣಾ ಪ್ರಣಾಳಿಕೆಯಲ್ಲಿ ನಮ್ಮ ಬೇಡಿಕೆಗಳನ್ನು ಸೇರಿಸಿಕೊಳ್ಳಬೇಕೆಂದು ರವೀಂದ್ರ ತಿಳಿಸಿದರು.







