ಕಾಂಗ್ರೆಸ್ ವಿಜಯಯಾತ್ರೆ ರಾಜ್ಯದಿಂದಲೆ ಆರಂಭ: ಡಾ.ನಾಸೀರ್ ಹುಸೇನ್

ಬೆಂಗಳೂರು, ಮಾ.31: ಕಾಂಗ್ರೆಸ್ ಪಕ್ಷದ ವಿಜಯ ಯಾತ್ರೆಯು ರಾಜ್ಯ ವಿಧಾನಸಭೆ ಚುನಾವಣೆಯಿಂದಲೆ ಆರಂಭಗೊಳ್ಳಲಿದೆ ಎಂದು ಎಐಸಿಸಿ ವಕ್ತಾರ ಹಾಗೂ ನೂತನ ರಾಜ್ಯಸಭಾ ಸದಸ್ಯ ಡಾ.ಸೈಯ್ಯದ್ ನಾಸೀರ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದರು.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ರಾಜ್ಯದ ಚುನಾವಣೆ ಮುಗಿಯುತ್ತಿದ್ದಂತೆ ರಾಜಸ್ಥಾನದ ವಿಧಾನಸಭಾ ಚುನಾವಣೆ ನಡೆಯಲಿದೆ. ಇತ್ತೀಚೆಗೆ ಅಲ್ಲಿ ನಡೆದ ಎಲ್ಲ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ ಎಂದರು.
2019ರ ಲೋಕಸಭಾ ಚುನಾವಣೆಗೆ ಮುನ್ನ ರಾಜಸ್ಥಾನದ, ಮಧ್ಯಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವ ವಿಶ್ವಾಸವಿದೆ. ಕರ್ನಾಟಕದ ಚುನಾವಣಾ ಫಲಿತಾಂಶವು ಈ ರಾಜ್ಯಗಳ ಮೇಲೂ ಪರಿಣಾಮ ಬೀರಲಿದೆ ಎಂದು ಅವರು ಹೇಳಿದರು.
ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜಸ್ಥಾನ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ನಡೆದಿರುವ ಉಪ ಚುನಾವಣೆಗಳಲ್ಲಿ ವಿರೋಧ ಪಕ್ಷಗಳೆ ಗೆಲುವು ಸಾಧಿಸಿವೆ. ಆದುದರಿಂದ, ಅಭಿವೃದ್ಧಿ ವಿಚಾರ ಬಿಟ್ಟು, ಕೋಮು ಆಧಾರದ ಮೇಲೆ ಜನರನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದರು.
ಉತ್ತರಪ್ರದೇಶದಲ್ಲಿ ಬಿಎಸ್ಪಿ-ಎಸ್ಪಿ ಮೈತ್ರಿಯಿಂದ ಬಿಜೆಪಿಗೆ ಹಿನ್ನಡೆಯಾಗಿದೆ. ಅದೇ ರೀತಿ ಕಾಂಗ್ರೆಸ್ ಪಕ್ಷವು ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈ ಜೋಡಿಸುವ ಸಂಬಂಧ ಈಗಾಗಲೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ನಾಸೀರ್ ಹುಸೇನ್ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರವು ಐದು ವರ್ಷಗಳಲ್ಲಿ ನೀಡಿರುವ ಕಾರ್ಯಕ್ರಮಗಳು, ಯೋಜನೆಗಳು ದೇಶದ ಯಾವುದೆ ರಾಜ್ಯಗಳಲ್ಲಿಯೂ ಇಲ್ಲ. ಕೆಲವು ಯೋಜನೆಗಳ ಬಗ್ಗೆ ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಸಂಶೋಧನೆಗಳು ನಡೆಯುತ್ತಿವೆ ಎಂದು ಅವರು ಹೇಳಿದರು.
ಕೇರಳ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ಬಿಜೆಪಿಯೇತರ ಪಕ್ಷಗಳ ಆಡಳಿತವಿದೆ. ರಾಜ್ಯದಲ್ಲಿ ಈಗಾಗಲೆ ಅಧಿಕಾರದ ರುಚಿ ಅನುಭವಿಸಿರುವ ಬಿಜೆಪಿ, ಏನಾದರೂ ಮಾಡಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. ಯಾವುದೆ ಕಾರಣಕ್ಕೂ ಅದಕ್ಕೆ ಅವಕಾಶ ನೀಡಬಾರದು ಎಂದು ನಾಸೀರ್ ಹುಸೇನ್ ತಿಳಿಸಿದರು.
ಮುಸ್ಲಿಮರ ಹೆಸರಿನಲ್ಲಿ ಬೆಳಕಿಗೆ ಬಂದಿರುವ ಎಸ್‌ಡಿಪಿಐ, ಎಐಎಂಐಎಂ, ಎಂಇಪಿ ಸೇರಿದಂತೆ ಇನ್ನಿತರ ಪಕ್ಷಗಳು ತಾವು ಯಾರಿಗೆ ಸಹಕಾರ ನೀಡುತ್ತಿದ್ದೇವೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಗುಜರಾತ್, ಉತ್ತರಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಜಾತ್ಯತೀತ ಮತಗಳ ವಿಭಜನೆಯಿಂದ ಬಿಜೆಪಿ ಅಧಿಕಾರಕ್ಕೆ ಬರುವಂತಾಯಿತು. ಈ ಸತ್ಯವನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಹೈದರಾಬಾದ್-ಕರ್ನಾಟಕ ಭಾಗದವನಾದ ನನ್ನನ್ನು ಮೊದಲು ಗುರುತಿಸಿ ತರಬೇತಿ ನೀಡಿದ್ದು ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಇವರ ಮಾರ್ಗದರ್ಶನದಿಂದ ರಾಜಕೀಯವಾಗಿ ಸಾಕಷ್ಟು ಅನುಭವವನ್ನು ಪಡೆದಿದ್ದೇನೆ ಎಂದು ಅವರು ತಿಳಿಸಿದರು.
ವಿಧಾನಪರಿಷತ್ ಚುನಾವಣೆಯಲ್ಲಿ ಈ ಹಿಂದೆ ಇಕ್ಬಾಲ್ ಅಹಮದ್ ಸರಡಗಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು, ಷಡ್ಯಂತ್ರದಿಂದ ಸೋಲು ಅನುಭವಿಸಬೇಕಾಯಿತು. ರಾಜ್ಯಸಭಾ ಚುನಾವಣೆಯಲ್ಲಿ ನನ್ನ ವಿಚಾರದಲ್ಲಿ ಆ ರೀತಿಯ ಘಟನೆ ಮರುಕಳಿಸದಂತೆ ಮಲ್ಲಿಕಾರ್ಜುನ ಖರ್ಗೆ, ಜಾಫರ್‌ಶರೀಫ್, ರಹ್ಮಾನ್‌ಖಾನ್ ಸೇರಿದಂತೆ ಎಲ್ಲ ಮುಖಂಡರು ಎಚ್ಚರಿಕೆವಹಿಸಿದ್ದು, ನನ್ನ ಗೆಲುವಿಗೆ ಕಾರಣವಾಯಿತು ಎಂದು ಅವರು ಹೇಳಿದರು.
ವಿದ್ಯಾರ್ಥಿ ಸಂಘಟನೆ, ಯುವ ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಆರಂಭಿಸಿದ ನನಗೆ ಮುಸ್ಲಿಮ್ ಕೋಟಾದಲ್ಲಿ ರಾಜ್ಯಸಭೆಗೆ ಪ್ರವೇಶ ಕಲ್ಪಿಸಲಾಗಿದೆ. ರಾಜ್ಯದ ಹಾಗೂ ದೇಶದ ಮುಸ್ಲಿಮರ ಧ್ವನಿಯಾಗಿ ರಾಜ್ಯಸಭೆಯಲ್ಲಿ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ನಾಸೀರ್ ಹುಸೇನ್ ತಿಳಿಸಿದರು.







