ಎ.3 ರಂದು ದಾವಣಗೆರೆಗೆ ಆಗಮಿಸಲಿರುವ ರಾಹುಲ್ ಗಾಂಧಿ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ದಾವಣಗೆರೆ,ಎ.01: ಎ.3 ರಂದು ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಸೇರಿದಂತೆ ನೂರಾರು ಕೈ ನಾಯಕರು ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಂದು ಬೆಳಿಗ್ಗೆ ಶಿವಮೊಗ್ಗ, ಹೊನ್ನಾಳಿ, ಹರಿಹರದ ಕಾರ್ಯಕ್ರಮ ಮುಗಿಸಿಕೊಂಡು, ದಾವಣಗೆರೆಗೆ ಆಗಮಿಸಲಿದ್ದು, ನಂತರ ಸಾರ್ವಜನಿಕ ಸಮಾರಂಭದಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರು ಮಾತನಾಡಲಿದ್ದಾರೆ ಎಂದ ಅವರು, ಹೈಸ್ಕೂಲ್ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆ ಮಾಡಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ, ರಾಜ್ಯ ನಾಯಕರೂ ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಪಕ್ಷದ ಕಾರ್ಯಕ್ರಮದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಾ.ಪರಮೇಶ್ವರ ಸೇರಿದಂತೆ ಬಹುತೇಕ ಎಲ್ಲಾ ನಾಯಕರೂ ದಾವಣಗೆರೆಯಲ್ಲೇ ವಾಸ್ತವ್ಯ ಮಾಡುವರು. ಎ.4 ರಂದು ಬೆಳಿಗ್ಗೆ ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸುವರು ಎಂದರು.
ದಾವಣಗೆರೆ ಜಿಲ್ಲೆಯ ಎಂಟೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯ ಸಾಧಿಸಲಿದ್ದು, ಎಲ್ಲೆಡೆ ಕಾಂಗ್ರೆಸ್ ಪರ ಅಲೆ ಕಂಡು ಬರುತ್ತಿದೆ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದರು.





