ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಅನುಮಾನವಿಲ್ಲ : ಡಾ.ಜಿ.ಪರಮೇಶ್ವರ್

ಹುಬ್ಬಳ್ಳಿ, ಎ.3: ವಿಧಾನಸಭಾ ಚುನಾವಣೆಯಲ್ಲಿ ಜನರ ಆಶೀರ್ವಾದದೊಂದಿಗೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ. ನಮ್ಮ ಸರಕಾರ ನೀಡಿರುವ ಕಾರ್ಯಕ್ರಮಗಳು, ಯೋಜನೆಗಳು ಜನರ ಮನಸ್ಸನ್ನು ಗೆದ್ದಿವೆ ಎಂದರು.
ರಾಜ್ಯದ ವಿವಿಧ ಭಾಗಗಳಲ್ಲಿ ಈಗಾಗಲೆ ನಾವು ನಡೆಸಿರುವ ಪ್ರವಾಸದಲ್ಲಿ ಜನರಿಗೆ ನಮ್ಮ ಮೇಲೆ ಭರವಸೆ ಇರುವುದು ಕಂಡು ಬಂದಿದೆ. ರಾಜ್ಯಕ್ಕೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರಮೋದಿ ಸೇರಿದಂತೆ ಯಾರೇ ಬಂದರೂ ಯಾವ ಬದಲಾವಣೆಯೂ ಆಗುವುದಿಲ್ಲ ಎಂದು ಪರಮೇಶ್ವರ್ ಹೇಳಿದರು.
ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಗೆ ವ್ಯಾಪಕ ಜನ ಬೆಂಬಲ ವ್ಯಕ್ತವಾಗುತ್ತಿದೆ. ನಮ್ಮ ಸರಕಾರವು ಐದು ವರ್ಷಗಳ ಕಾಲ ಮಾಡಿರುವ ಅಭಿವೃದ್ಧಿ ಕೆಲಸಗಳ ಆಧಾರದ ಮೇಲೆ ಮತ ಯಾಚನೆ ಮಾಡುತ್ತೇವೆ. ಜನ ನಮಗೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆಯಿದೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಏನೇ ತಂತ್ರಗಳನ್ನು ಮಾಡಿದರೂ ಯಾವುದು ಯಶಸ್ವಿಯಾಗುವುದಿಲ್ಲ. ಚುನಾವಣೆಯಲ್ಲಿ ಪಕ್ಷ ಗೆದ್ದ ಬಳಿಕ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಯಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಿಕೆಟ್ ಹಂಚಿಕೆ ಸಂಬಂಧ ಯಾವುದೆ ಗೊಂದಲಗಳು ಇಲ್ಲ. ಯಾರಿಗೆ ಯಾವ ಕ್ಷೇತ್ರದಿಂದ ಟಿಕೆಟ್ ನೀಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನೈಸ್ ಮುಖ್ಯಸ್ಥ ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಅಶೋಕ್ ಖೇಣಿಗೆ ಕಾಂಗ್ರೆಸ್ ಟಿಕೆಟ್ ನೀಡುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇನ್ನೂ ನನ್ನ ಟಿಕೆಟ್ ಖಾತ್ರಿಯಾಗಿಲ್ಲ. ಬೇರೆಯವರ ಬಗ್ಗೆ ನಾನು ಹೇಗೆ ಹೇಳಲಿ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೆ ಘೋಷಿಸಿರುವಂತೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದಲೆ ಕಣಕ್ಕಿಳಿಯಲಿದ್ದಾರೆ. ಅವರು ಕ್ಷೇತ್ರ ಬದಲಾವಣೆ ಮಾಡುತ್ತಾರೆ ಎಂಬುದು ಕೇವಲ ಊಹಾಪೋಹ ಅಷ್ಟೇ. ಇನ್ನೂ ಯಾವ ಅಭ್ಯರ್ಥಿಗೂ ಟಿಕೆಟ್ ಘೋಷಣೆಯಾಗಿಲ್ಲ. ಹೀಗಾಗಿ ಈ ವಿಚಾರದ ಕುರಿತು ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಪರಮೇಶ್ವರ್ ಹೇಳಿದರು.







