ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ನಟ ಸುದೀಪ್

ಬೆಂಗಳೂರು, ಎ. 5: ಚಿತ್ರನಟ ಕಿಚ್ಚ ಸುದೀಪ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಿಢೀರ್ ಬೆಳವಣಿಗೆಯೊಂದರಲ್ಲಿ ಭೇಟಿ ಮಾಡುವ ಮೂಲಕ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದಾರೆ.
ಗುರುವಾರ ಬೆಳಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ ಸುದೀಪ್, ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದ್ದಾರೆಂದು ಗೊತ್ತಾಗಿದೆ.
ಎರಡು ದಿನಗಳ ಹಿಂದೆಯಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿದ್ದ ಸುದೀಪ್, ಸುದೀರ್ಘ ಸಮಾಲೋಚನೆ ನಡೆಸಿದ್ದರು. ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಅವರ ರಾಜಕೀಯ ನಡೆ ಬಗ್ಗೆ ಹಲವು ವಿಚಾರಗಳು ಗರಿಗೆದರಿವೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುದೀಪ್ ಅವರಿಗೆ ಮನವಿ ಮಾಡಿದ್ದಾರೆಂದು ಹೇಳಲಾಗಿದೆ. ಹೀಗಾಗಿ ಯಾವ ಪಕ್ಷದ ಪರ ಸುದೀಪ್ ಪ್ರಚಾರಕ್ಕೆ ಇಳಿಯಲಿದ್ದಾರೆಂಬುದು ಕುತೂಹಲ ಕೆರಳಿಸಿದೆ.
ಎ.7ರಂದು ಆರಂಭಗೊಳ್ಳಲಿರುವ ಸಿಸಿಎಲ್ ಕ್ರಿಕೆಟ್ ಟೂರ್ನಿ ಉದ್ಘಾಟನೆಗೆ ಆಗಮಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲು ನಟ ಸುದೀಪ್, ಮುಖ್ಯಮಂತ್ರಿ ನಿವಾಸಕ್ಕೆ ತೆರಳಿದ್ದರು ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.
‘ನೆಲಮಂಗಲದಲ್ಲಿ ನಡೆಯುವ ಕೆಸಿಎಲ್ ಕ್ರಿಕೆಟ್ ಕಪ್ ಉದ್ಘಾಟನೆ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಲು ನಟ ಕಿಚ್ಚ ಸುದೀಪ್ ಆಗಮಿಸಿದ್ದರು. ಅವರ ಭೇಟಿ ವೇಳೆ ಬೇರೆ ಏನೂ ಚರ್ಚೆ ಮಾಡಿಲ್ಲ. ಪಕ್ಷದ ಪರವಾಗಿ ಪ್ರಚಾರ ಕೈಗೊಳ್ಳುವಂತೆ ನಟ ಸುದೀಪ್‌ಗೆ ನಾನು ಹೇಳಿಲ್ಲ’
-ಸಿದ್ದರಾಮಯ್ಯ ಮುಖ್ಯಮಂತ್ರಿ