ಮೋದಿ ನೇತೃತ್ವದ ಕೇಂದ್ರ ಸರಕಾರ ಜನವಿರೋಧಿ: ಮಾಜಿ ಪ್ರಧಾನಿ ದೇವೇಗೌಡ ವಾಗ್ದಾಳಿ

ಬೆಂಗಳೂರು, ಎ. 8: ಪ್ರಧಾನಿ ಮೋದಿ ನೇತೃತ್ವದ ಸರಕಾರ ಜಾರಿಗೆ ತಂದ ಜಿಎಸ್ಟಿಯಿಂದ ಸಾಮಾನ್ಯಜನರು ಹಾಗೂ ವ್ಯಾಪಾರಸ್ಥರಿಗೆ ತೀವ್ರ ತೊಂದರೆಯಾಗಿದೆ. ಮೇಕ್ ಇನ್ ಇಂಡಿಯಾ ಯೋಜನೆಯೂ ಯಶಸ್ವಿಯಾಗಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.
ರವಿವಾರ ಬಸವನಗುಡಿ ವಿಧಾನಸಭಾ ಕ್ಷೇತ್ರದ ಮಾರ್ವಾಡಿ ಸಮುದಾಯ ಭವನದಲ್ಲಿ ಜೈನ್ ಮೈನಾರಿಟಿ ಟ್ರಸ್ಟ್‌ನಿಂದ ಆಯೋಜಿಸಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 2014ರಲ್ಲಿ ಕೇಂದ್ರ ಸರಕಾರಕ್ಕೆ ಇದ್ದ ಶಕ್ತಿ ಈಗ ಇಲ್ಲ. ಈಗಿನ ಕೇಂದ್ರ ಸರಕಾರ ಸಾಮಾನ್ಯ ಜನರ ಪರವಾಗಿಲ್ಲ ಎಂದು ಟೀಕಿಸಿದರು.
ಸಾಮಾನ್ಯ ಜನರ ಸಮಸ್ಯೆಗಳನ್ನು ಅರಿತು, ಬಗೆಹರಿಸಲು ಪ್ರಾದೇಶಿಕ ಪಕ್ಷದ ಅವಶ್ಯಕತೆ ಇದೆ. ಹೀಗಾಗಿ, ಜೆಡಿಎಸ್ ಅಧಿಕಾರದಲ್ಲಿದ್ದ ವೇಳೆ ಜಾರಿಯಾದ ಜನಪರ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಜೆಡಿಎಸ್ ಪಕ್ಷಕ್ಕೆ ಬೆಂಬಲಿಸಿ ಎಂದು ದೇವೇಗೌಡ ಮನವಿ ಮಾಡಿದರು.
ಈ ಚುನಾವಣೆಯಲ್ಲಿ ರಾಜ್ಯದ ಜನತೆ ಜೆಡಿಎಸ್ ಪಕ್ಷಕ್ಕೆ ಆಶೀರ್ವದಿಸುತ್ತಾರೆ. ಹೀಗಾಗಿ, ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ದೇವೇಗೌಡ ಇದೇ ವೇಳೆ ವಿಶ್ವಾಸವ್ಯಕ್ತಪಡಿಸಿದರು. ರಾಷ್ಟ್ರೀಯ ಕಾರ್ಯದರ್ಶಿ ಪಿಜಿಆರ್ ಸಿಂಧ್ಯಾ, ವಿಧಾನ ಪರಿಷತ್ ಸದಸ್ಯ ಟಿ.ಎ.ಸರವಣ ಹಾಜರಿದ್ದರು.







