ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸಚಿವ ಎಚ್.ಎಂ.ರೇವಣ್ಣ ಸ್ಪರ್ಧೆ ಸಾಧ್ಯತೆ

ಬೆಂಗಳೂರು, ಎ. 11: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
ಎಚ್.ಎಂ.ರೀವಣ್ಣ ಅವರು ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಯೋಗೇಶ್ವರ್‌ಗೆ ಪ್ರಬಲ ಪೈಪೋಟಿ ನೀಡಲಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ರೇವಣ್ಣ ನಿಲ್ಲಿಸಲು ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಸಮ್ಮತಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಸಮ್ಮತಿಸಿದ್ದಾರೆಂದು ಗೊತ್ತಾಗಿದೆ.
ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿ ಇದೀಗ ಬಿಜೆಪಿ ಸೇರ್ಪಡೆಯಾಗಿ ಪಕ್ಷದ ವಿರುದ್ಧ ಮಾತನಾಡುತ್ತಿರುವ ಯೋಗೇಶ್ವರ್ ಸೋಲಿಸಲು ಕಾಂಗ್ರೆಸ್ ರಣತಂತ್ರ ರೂಪಿಸಿದ್ದು, ಪ್ರಬಲ ಪೈಪೋಟಿ ನೀಡಬಲ್ಲ ರೇವಣ್ಣ ಅವರನ್ನು ಅಖಾಡಕ್ಕೆ ಇಳಿಸಲು ಮುಂದಾಗಿದೆ.
ಚನ್ನಪಟ್ಟಣ ಕ್ಷೇತ್ರದಿಂದಲೇ ಜೆಡಿಎಸ್‌ನಿಂದ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆ ಇದ್ದು, ಯೋಗೇಶ್ವರ್ ಹಾಗೂ ಕುಮಾರಸ್ವಾಮಿ ವಿರುದ್ಧ ರೇವಣ್ಣ ಸೂಕ್ತ ಅಭ್ಯರ್ಥಿ ಎಂಬ ಅಭಿಪ್ರಾಯಕ್ಕೆ ಕಾಂಗ್ರೆಸ್ ಮುಖಂಡರು ಬಂದಿದ್ದಾರೆ. ಹೀಗಾಗಿ ಈ ಬಾರಿ ಚನ್ನಪಟ್ಟಣ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಿಶ್ಚಿತ ಎನ್ನಲಾಗುತ್ತಿದೆ.
ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳೇ ನಿರ್ಣಾಯಕ. ಆ ಹಿನ್ನೆಲೆಯಲ್ಲಿ ಯೋಗೇಶ್ವರ್ ಮತ್ತು ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದು, ಒಕ್ಕಲಿಗ ಸಮುದಾಯದ ಮತಗಳು ವಿಭಜನೆ ಆಗುವ ಸಾಧ್ಯತೆಗಳಿದ್ದು, ಅದರ ಲಾಭ ಪಡೆದುಕೊಳ್ಳಲು ರೇವಣ್ಣ ಅವರನ್ನು ಕಣಕ್ಕಿಸಲು ತೀರ್ಮಾನಿಸಿದ್ದು, ‘ಅಹಿಂದ’ ಮತಗಳನ್ನು ಕ್ರೋಡೀಕರಣಕ್ಕೆ ಆಸ್ಥೆ ವಹಿಸಲಾಗುತ್ತಿದೆ ಎಂದು ಹೇಳಲಾಗಿದೆ.
‘ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಬೆಂಗಳೂರಿನ ಗೋವಿಂದರಾಜನಗರ, ಹೆಬ್ಬಾಳ ಕ್ಷೇತ್ರದ ಟಿಕೆಟ್ ಕೇಳಿದ್ದೆ. ಆದರೆ, ಪಕ್ಷ ಟಿಕೆಟ್ ನೀಡಿರಲಿಲ್ಲ. ಇದೀಗ ವಿಧಾನ ಪರಿಷತ್ ಸದಸ್ಯನಾಗಿದ್ದು, ವಿಧಾನಸಭಾ ಚುನಾವಣೆ ಸ್ಪರ್ಧಿಸುವ ಇಚ್ಛೆ ನನಗಿರಲಿಲ್ಲ. ಆದರೆ, ಚನ್ನಪಟ್ಟಣ ಕ್ಷೇತ್ರಕ್ಕೆ ನನ್ನನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ ಎಂಬ ಸುದ್ದಿ ಇದೆ. ನನಗೆ ಈ ಬಗ್ಗೆ ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ. ಪಕ್ಷದ ತೀರ್ಮಾನಕ್ಕೆ ಬದ್ಧ’
-ಎಚ್.ಎಂ.ರೇವಣ್ಣ ಸಾರಿಗೆ ಸಚಿವ







