ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಬಿ.ವಿ.ಆಚಾರ್ಯ ಒತ್ತಾಯ

ಬೆಂಗಳೂರು, ಎ.11: ರಾಜ್ಯ ಹೈಕೋರ್ಟ್‌ನಲ್ಲಿ ಖಾಲಿಯಿರುವ ನ್ಯಾಯಮೂರ್ತಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಹಿರಿಯ ವಕೀಲ ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ.ಆಚಾರ್ಯ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹೈಕೋರ್ಟ್‌ನಲ್ಲಿ ಕೆಲಸ ನಿರ್ವಹಿಸಲು 62 ನ್ಯಾಯಮೂರ್ತಿಗಳ ಅಗತ್ಯವಿದೆ. ಆದರೆ, ಈಗ ಕೇವಲ 33 ನ್ಯಾಯಮೂರ್ತಿಗಳಿದ್ದಾರೆ. ಇದರಿಂದಾಗಿ ವರ್ಷದಿಂದ ವರ್ಷಕ್ಕೆ ವಿಲೇವಾರಿಯಾಗದೆ ಬಾಕಿ ಉಳಿದುಕೊಳ್ಳುತ್ತಿರುವ ವ್ಯಾಜ್ಯಗಳ ಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸುಪ್ರೀಂಕೋರ್ಟ್‌ನ ಕೊಲಿಜಿಯಂ ಕೇಂದ್ರ ಸರಕಾರಕ್ಕೆ ಹಲವು ನ್ಯಾಯಾಧೀಶರ ಹೆಸರನ್ನು ಶಿಫಾರಸ್ಸು ಮಾಡಿದ್ದರೂ, ಕೇಂದ್ರ ಸರಕಾರವು ನೇಮಕ ಮಾಡದೆ ವಿಳಂಬ ನೀತಿ ಅನುಸರಿಸುತ್ತಿದೆ. ಕಳೆದ 4 ವರ್ಷಗಳಲ್ಲಿ 20 ನ್ಯಾಯಾಧೀಶರನ್ನು ನೇಮಕ ಮಾಡಬೇಕು ಎಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರೂ, ಇದುವರೆಗೂ ಕೇವಲ 5 ನ್ಯಾಯಾಧೀಶರನ್ನು ನೇಮಕ ಮಾಡಲಾಗಿದೆ. ಆದುದರಿಂದಾಗಿ ಕೂಡಲೇ ಕೊಲಿಜಿಯಂ ಶಿಫಾರಸ್ಸು ಸಲ್ಲಿಸಿರುವ ಎಲ್ಲವನ್ನು ತ್ವರಿತವಾಗಿ ನೇಮಕ ಮಾಡಲು ಮುಂದಾಗೇಕು ಎಂದು ಅವರು ಆಗ್ರಹಿಸಿದರು.
ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳ ರಾಜಕೀಯ ಕಿತ್ತಾಟದಿಂದ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿದೆ. ಇದರ ಪರಿಣಾಮದಿಂದಾಗಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಪೆಟ್ಟು ಬೀಳುತ್ತಿದೆ. ಹೀಗಾಗಿ, ಕೇಂದ್ರ ಸರಕಾರ ಇದಕ್ಕೆ ಅವಕಾಶ ನೀಡಬಾರದು. ಕಾನೂನು ವ್ಯವಸ್ಥೆಯನ್ನು ದುರ್ಬಲಗೊಳಿಸುವ ಬದಲಿಗೆ ಬಲಪಡಿಸಬೇಕು. ಅದಕ್ಕಾಗಿ, ಕೂಡಲೇ ಖಾಲಿಯಿರುವ ನ್ಯಾಯಮೂರ್ತಿಗಳ ಹುದ್ದೆಗಳನ್ನು ಭರ್ತಿ ಮಾಡಬೇಕು. ಹಾಗು ಕೊಲಿಜಿಯಂನಲ್ಲಿ ಬಾಕಿಯಿರುವ ಎಲ್ಲವನ್ನೂ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ, ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳೇ ಹೇಳಿದ್ದಾರೆ. ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವ ನ್ಯಾಯಾಂಗದ ಕತ್ತು ಹಿಸುಕುವ ಯಾವುದೇ ಸರಕಾರಗಳು ಉಳಿದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಮೇಲೆ ರಾಜ್ಯ ಸರಕಾರವೂ ಒತ್ತಡ ಹೇರಬೇಕು ಎಂದರು.
ಕೇಂದ್ರ ಸರಕಾರ ಮತ್ತು ನ್ಯಾಯಮೂರ್ತಿಗಳ ಜಗಳದಲ್ಲಿ ಕಕ್ಷಿದಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಕೇಂದ್ರ ಸರಕಾರ ಶೀಘ್ರ ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆಗಳಿಗೆ ನೇಮಕಾತಿ ಮಾಡಬೇಕು. ಇಲ್ಲದಿದ್ದಲ್ಲಿ ಕೇಂದ್ರ ಸರಕಾರದ ವಿರುದ್ಧ ರಾಜ್ಯವ್ಯಾಪ್ತಿ ಹೋರಾಟ ಸಂಘಟಿಸಲಾಗುವುದು ಎಂದು ಎಚ್ಚರಿಸಿದರು.







