ಸುಗಮ, ನೈತಿಕ ಚುನಾವಣೆಗೆ ಎಲ್ಲಾ ಅಗತ್ಯ ಕ್ರಮ: ಕಾಪಶಿ

ಉಡುಪಿ, ಎ.16: ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗದ ಧ್ಯೇಯ ವಾಕ್ಯವಾದ, ಒಳಗೊಳ್ಳುವ, ಸುಗಮ ಮತ್ತು ನೈತಿಕ ಚುನಾವಣೆ ನಡೆಸಲು ಅಗತ್ಯವಾದ ಎಲ್ಲಾ ರೀತಿಯ ಕ್ರಮಗಳನ್ನು ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.
ಸೋಮವಾರ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ಎಲ್ಲರನ್ನೂ ಒಳಗೊಳ್ಳುವ ಉದ್ದೇಶದಿಂದ ಪ್ರಜಾಪ್ರಭುತ್ವ ವ್ಯವಸ್ಥೆಯ ಭಾಗವಾಗಿರುವ ಜಿಲ್ಲೆಯ ಎಲ್ಲಾ ಪುರುಷ, ಮಹಿಳೆಯರು, ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ವಿಶೇಷ ಚೇತನರು, ವಾಕ್, ಶ್ರವಣ, ದೃಷ್ಠಿ ದೋಷ ವುಳ್ಳವರು, ಲಿಂಗತ್ವ ಅಲ್ಪಸಂಖ್ಯಾತರು, ಹಿರಿಯ ನಾಗರೀಕರು ಎಲ್ಲರಿಗೂ ವಿಶೇಷ ಕಾರ್ಯಕ್ರಮಗಳ ಮೂಲಕ ಮತದಾನದ ಕುರಿತು ಅರಿವು ಮೂಡಿಸಲಾಗುತ್ತಿದೆ ಹಾಗೂ ಎಲ್ಲರನ್ನೂ ಒಳಗೊಂಡು ವಿಶೇಷ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಕಾಪಶಿ ಹೇಳಿದರು.
ಮತದಾನದಲ್ಲಿ ಪ್ರತಿಯೊಬ್ಬರೂ ಸುಗಮವಾಗಿ ಪಾಲ್ಗೊಳ್ಳುವ ಉದ್ದೇಶದಿಂದ, ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಬೆಳಕಿನ ವ್ಯವಸ್ಥೆ, ಸರದಿ ಸಾಲಿನಲ್ಲಿ ನಿಲ್ಲುವವರಿಗೆ ನೆರಳಿನ ವ್ಯವಸ್ಥೆ ಸೇರಿದಂತೆ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಿಬ್ಬಂದಿಗಳಿಗೆ ಸಹ ಮತಕೇಂದ್ರದಲ್ಲಿ ಎಲ್ಲಾ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುತ್ತಿದೆ. ವಿಶೇಷ ಚೇತನರಿಗೆ ರ್ಯಾಂಪ್ ವ್ಯವಸ್ಥೆ ಮಾಡಲಾಗಿದ್ದು, ಹಿರಿಯ ನಾಗರಿಕರಿಗೆ ಹಾಗೂ ಅಶಕ್ತರಿಗೆ ಗಾಲಿ ಕುರ್ಚಿ ವ್ಯವಸ್ಥೆ ಹಾಗೂ ಮನೆಯಿಂದ ಮತದಾನ ಕೇಂದ್ರಕ್ಕೆ ಬಂದು ಹೋಗಲು ಉಚಿತ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ 8064 ಮಂದಿ ವಿಕಲಚೇತನರನ್ನು ಗುರುತಿಸಲಾಗಿದೆ. ಅವರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲಾಗಿದೆ. ಅವರು ಸುಗಮವಾಗಿ ಮತಗಟ್ಟೆಗೆ ಬಂದು ಹೋಗಲು ವಾಹನ ವ್ಯವಸ್ಥೆ ಒದಗಿಸಲು ಕ್ರಮ ಕೈಗೊಂಡಿದೆ. ದೃಷ್ಠಿ ದೋಷವಿರುವವರಿಗೆ ಅಗತ್ಯ ಲೆನ್ಸ್ ವ್ಯವಸ್ಥೆ ಒದಗಿಸಲು ಕ್ರಮ ಕೈಗೊಂಡಿದ್ದು, ಪ್ರತಿ ಮತದಾರರೂ ಮತದಾನದಲ್ಲಿ ಸುಗಮವಾಗಿ ಪಾಲ್ಗೊಳ್ಳಲು ಎಲ್ಲಾ ರೀತಿಯ ಸೂಕ್ತ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಾಪಶಿ ಹೇಳಿದರು.
ಈ ಬಾರಿ ಚುನವಣಾ ಆಯೋಗ ನೈತಿಕ ಮತದಾನಕ್ಕೆ ಹೆಚ್ಚಿನ ಮಹತ್ವ ನೀಡಿದ್ದು, ಪ್ರತಿಯೊಬ್ಬ ಮತದಾರರು ಯಾವುದೇ ಆಸೆ, ಆಮಿಷ, ಒತ್ತಡ, ಪ್ರಲೋಭನೆಗಳಿಗೆ ಒಳಗಾಗದೇ ತಮ್ಮ ಸ್ವಂತ ವಿವೇಚನೆಯನ್ನು ಬಳಸಿ ಯೋಗ್ಯ ಅಭ್ಯರ್ಥಿಗೆ ಮತದಾನ ಮಾಡಿ. ಯಾವುದೇ ಭಯ, ಒತ್ತಡ, ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತನ್ನಿ. ನಿಮ್ಮ ಸಮಸ್ಯೆಗೆ ಸ್ಪಂದಿಸಲು ಜಿಲ್ಲಾಡಳಿತ ಸದಾ ಸಿದ್ದವಿದೆ. ಜಾಗೃತ ಮತದಾರರಿಂದ ಉತ್ತಮ ಅಭ್ಯರ್ಥಿ ಆಯ್ಕೆ ಸಾಧ್ಯ ಎಂದರು.
ಈ ಬಾರಿಯ ಚುನಾವಣೆಯಲ್ಲಿ ವಿವಿಪ್ಯಾಟ್ ಯಂತ್ರವನ್ನು ಅಳವಡಿಸಲಾಗಿದ್ದು, ಇದರಿಂದ ಮತದಾನದ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ವಿಶ್ವಾಸಾರ್ಹತೆ ಮೂಡಲಿದೆ ಎಂದರು. ವಿವಿ ಪ್ಯಾಟ್ ಯಂತ್ರದ ಕುರಿತು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಪ್ರಾತ್ಯಕ್ಷಿಕೆ ತೋರಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಉಡುಪಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ಮೋಹನ್‌ರಾಜ್, ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿ ಸಂಜೀವ ವಂಡ್ಸೆ, ರಾಜ್ಯ ಪ್ರತಿನಿಧಿ ಸಾನಾ ಉಪಸ್ಥಿತರಿದ್ದರು. ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ ವೀಣಾ ಸ್ವಾಗತಿಸಿದರು. ಪಿಡಿಓ ವುಹೇಶ್ ಕಾರ್ಯಕ್ರಮ ನಿರೂಪಿಸಿದರು.