ಚಿಕ್ಕಮಗಳೂರು: ಕಾಂಗ್ರೆಸ್‍ಗೆ ಜೆಡಿಯು ಮುಖಂಡ ಭರತ್ ಬೆಂಬಲ
ಚಿಕ್ಕಮಗಳೂರು, ಎ.29: ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದ ಜೆಡಿಯು ಜಿಲ್ಲಾ ಮಾಜಿ ಅಧ್ಯಕ್ಷ ಕೆ.ಭರತ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದು, ಚಿಕ್ಕಮಗಳೂರು ಹಾಗೂ ಮೂಡಿಗೆರೆ ಕ್ಷೇತ್ರಗಳಲ್ಲಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ತೊಡಗುವುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಾಜಿ ಸಚಿವ ಸಿ.ಆರ್.ಸಗೀರ್ ಅಹ್ಮದ್ ಅವರೊಂದಿಗೆ ಈ ಸಂಬಂಧ ಚರ್ಚಿಸಲಾಗಿದ್ದು, ನನ್ನ ಸ್ಪರ್ಧೆಯಿಂದ ಎದುರಾಳಿಗಳಿಗೆ ಅನುಕೂಲವಾಗುವ ಸಾಧ್ಯತೆ ಇರುವುದರಿಂದ ಸ್ಪರ್ಧೆಯಿಂದ ಹಿಂದಕ್ಕೆ ಸರಿದಿದ್ದೇನೆ. ಕಾಂಗ್ರೆಸ್ ಪಕ್ಷದ ನಾಯಕರಾದ ಎಚ್.ಸಿ. ಮಹಾದೇವಪ್ಪ, ಸಚಿವ ಎಚ್.ಆಂಜನೇಯ ಅವರು ದೂರವಾಣಿ ಮುಖಾಂತರ ಕರೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುವಂತೆ ತಿಳಿಸಿದ್ದಾರೆ. ಅದುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದಿರುವ ಅವರು, ಚಿಕ್ಕಮಗಳೂರು ಹಾಗೂ ಮೂಡಿಗೆರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಸ್ಪರ್ಧೆ ಇದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಾಗುವುದು. ಕಳೆದ 5 ವರ್ಷಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡಿದ್ದು, ಈ ಬಾರಿಯೂ ಕೂಡ ಅವರೇ ಮುಖ್ಯಮಂತ್ರಿಯಾಗುವುದು ಖಚಿತ ಎಂದು ತಿಳಿಸಿದ್ದಾರೆ.





