ಶಿವಮೊಗ್ಗ: ಪ್ರತ್ಯೇಕ ರಸ್ತೆ ಅಪಘಾತ; ಇಬ್ಬರು ಮೃತ್ಯು

ಶಿವಮೊಗ್ಗ, ಎ. 30: ಜಿಲ್ಲೆಯ ಶಿವಮೊಗ್ಗ ಹಾಗೂ ಸಾಗರ ತಾಲೂಕುಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಶಿವಮೊಗ್ಗ ವರದಿ: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬೀರನಕೆರೆ ಗ್ರಾಮದಲ್ಲಿ ಮಾರುತಿ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದ ಪರಿಣಾಮ ದೇವಧರಗೌಡ ಎಂಬುವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡ ದೇವಧರಗೌಡರನ್ನು ಮೊದಲು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ನಂತರ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಕಾರಿನ ಚಾಲಕನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಾಗರ ವರದಿ: ತಾಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಹಾಯಗಳಿ ಕಾಡಿನ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪುನೀತ್ ಮೃತಪಟ್ಟಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಪುನೀತ್‍ನನ್ನು ವಾಹನವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಕಾರು ಚಾಲಕನ ವಿರುದ್ದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.





