ಬೆಂಗಳೂರು : ಮುಂದಿನ ಏಳುದಿನ ಮಳೆಯಾಗುವ ಸಾಧ್ಯತೆ
ಬೆಂಗಳೂರು, ಮೇ 3: ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲ ಹೊರ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿಂದ ಮಳೆಯಾಗುತ್ತಿದ್ದು, ಇನ್ನೂ ಏಳು ದಿನಗಳ ಕಾಲ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಗರದಲ್ಲಿ ಮೇ 6 ಹಾಗೂ 7 ರಂದು ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡನ್ನು ಹಾದು ಹೋಗುವಂತೆ ಉತ್ತರದಿಂದ ದಕ್ಷಿಣದವರೆಗೆ ಮೋಡ ನಿರ್ಮಾಣವಾಗಲಿದೆ. ಹೀಗಾಗಿ, ತೇವಾಂಶ ಪ್ರಮಾಣ ಹೆಚ್ಚಳವಾಗಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಳಿದ ತಾಪಮಾನ: ಬೆಂಗಳೂರು ನಗರ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಗರಿಷ್ಠ ತಾಪಮಾನ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಯ ದಕ್ಷಿಣ ಕನ್ನಡ ಮತ್ತು ಉಡುಪಿ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿಯ ಕೆಲ ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ನಿರೀಕ್ಷೆ ಇದೆ.
ತಾಪಮಾನ ಎಲ್ಲೆಲ್ಲಿ ಎಷ್ಟು?: ಕಲಬುರಗಿಯಲ್ಲಿ 43.4 ಡಿಗ್ರಿ ಸೆಲ್ಷಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಷಿಯಸ್ ದಾಟಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಷಿಯಸ್ ಕನಿಷ್ಟ 22.2 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣ ಗರಿಷ್ಠ 33.6 ಡಿಗ್ರಿ ಸೆಲ್ಷಿಯಸ್, ಕನಿಷ್ಟ 21ಡಿಗ್ರಿ ಸೆಲ್ಷಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 33.2 ಡಿಗ್ರಿ ಸೆಲ್ಸಿಯಸ್, ಕನಿಷ್ಟ 21.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎನ್ನಲಾಗಿದೆ.







