ಉಡುಪಿ ಜಿಲ್ಲೆಯ 5 ಕ್ಷೇತ್ರಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳಿಗೆ ಜಯ: ತೋನ್ಸೆ ವಿಶ್ವಾಸ
ಉಡುಪಿ, ಮೇ 8: ಕ್ಷೇತ್ರದಲ್ಲಿ ಆದ ಅಭಿವೃದ್ಧಿ ಆಧಾರದಲ್ಲಿ ಕಾಂಗ್ರೆಸ್ ಪಕ್ಷ ಮತ ಯಾಚನೆ ಮಾಡುತ್ತಿದೆ. ಮತದಾರರು ಸರಕಾರದ ಜನಪರ ಕಾಳಜಿ ಹಾಗೂ ಜನೋಪಯೋಗಿ ಕಾರ್ಯಕ್ರಮಗಳನ್ನು ಪರಿಗಣಿಸಿ ಜಿಲ್ಲೆಯ 5 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಈಗಾಗಲೇ ಮತದಾರರು ಕಳೆದ ಬಿಜೆಪಿ ಸರಕಾರದ ಭ್ರಷ್ಟಾಚಾರದ ದುರಾಡಳಿತ ಕಂಡಿದ್ದು, ಸಿದ್ದರಾಮಯ್ಯ ನೇತೃತ್ವದ ಸರಕಾರದ ಅಭಿವೃದ್ಧಿ ಯೋಜನೆಗೆ ಜನತೆಯಿಂದ ಉತ್ತಮ ಸ್ಪಂದನೆ ದೊರಕಿದೆ. ಸಿದ್ದರಾಮಯ್ಯನರವರ ಜನಪರ ಕಾರ್ಯಕ್ರಮಗಳು ಕಾಂಗ್ರೆಸ್‌ಗೆ ಶ್ರೀರಕ್ಷೆಯಾಗಲಿದೆ ಎಂದರು.
ರಾಜ್ಯ ಸರಕಾರದ 5 ವರ್ಷಗಳ ಅವಧಿಯಲ್ಲಿ ಕೈಗೊಂಡ ಆರ್ಥಿಕ ಆಡಳಿತಾತ್ಮಕ ಮತ್ತು ಸಾಮಾಜಿಕ ಸುಧಾರಣ ಕಾರ್ಯಕ್ರಮಗಳನ್ನು ಜನರು ಸ್ವೀಕರಿಸಿದ್ದು ಇದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಪೂರಕವಾಗಿ ಪರಿಣಮಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲಾ ಅಭ್ಯರ್ಥಿಗಳು ಅತ್ಯಧಿಕ ಬಹುಮತದೊಂದಿಗೆ ಜಯಗಳಿಸಲಿದ್ದಾರೆ ಎಂದು ಜನಾರ್ದನ ತೋನ್ಸೆ ಹೇಳಿದರು.





