ರಾಜರಾಜೇಶ್ವರಿನಗರ ಕ್ಷೇತ್ರದ ಚುನಾವಣೆ ಮುಂದೂಡಿದರೆ ಸೂಕ್ತ: ಎಚ್.ಡಿ.ಕುಮಾರಸ್ವಾಮಿ

ಬಾಗಲಕೋಟೆ, ಮೇ 9: ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಜೆಡಿಎಸ್ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡುವ ಮೂಲಕ ಕಾಂಗ್ರೆಸ್ ಕುತಂತ್ರ ರಾಜಕಾರಣ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಬುಧವಾರ ಬಾಗಲಕೋಟೆಯ ಗುಳೇದಗುಡ್ಡದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪ್ರಾಬಲ್ಯವಿರುವ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರ ಹಾಗೂ ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರದಲ್ಲೂ ತಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಅವರು, ರಾಜರಾಜೇಶ್ವರಿ ಕ್ಷೇತ್ರದ ಚುನಾವಣೆಯನ್ನು ಮುಂದೂಡಿದರೆ ಸೂಕ್ತ ಎಂದು ತಿಳಿಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಂದಾಯ ನಿರೀಕ್ಷಕ ಸೇರಿದಂತೆ ಅಧಿಕಾರಿಗಳು ಸೇರಿಕೊಂಡು 10ಸಾವಿರಕ್ಕೂ ಹೆಚ್ಚು ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಅವರು ದೂರಿದ್ದಾರೆ.
ಚುನಾವಣಾ ಆಯೋಗ ಯಾರದ್ದೋ ಮುಲಾಜಿಗೆ ಸಿಲುಕಿದಂತಿದೆ. ಹೀಗಾಗಿ, ಈ ಬಾರಿ ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುತ್ತದೆ ಎಂಬ ನಂಬಿಕೆ ಇಲ್ಲದಂತಾಗಿದೆ ಎಂದು ಚುನಾವಣಾ ಆಯೋಗದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತೀರ್ಪು ನೀಡುವವರು ಸಿದ್ದರಾಮಯ್ಯ, ಯಡಿಯೂರಪ್ಪ ಅವರಲ್ಲ. ರಾಜ್ಯದ ಜನತೆ ತೀರ್ಪು ನೀಡುತ್ತಾರೆ. ಹೀಗಾಗಿ, ಯಾರಿಗೆ ಎಷ್ಟು ಸ್ಥಾನ ಬರುತ್ತದೆಂದು ಫಲಿತಾಂಶ ಬರುವವರೆಗೂ ಕಾದು ಆನಂತರ ಮಾತನಾಡಲಿ ಎಂದು ಕುಮಾರಸ್ವಾಮಿ ಹೇಳಿದರು.







