ಪ್ರಮೋದ್ ಮುತಾಲಿಕ್ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಮೇ 10: ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಧರ್ಮದ ಹೆಸರಲ್ಲಿ ಮತ ಯಾಚಿಸುತ್ತಿದೆ ಎಂದು ಆರೋಪಿಸಿ ರಾಷ್ಟ್ರೀಯ ಹಿಂದೂ ಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.
ಒಮ್ಮೆ ಚುನಾವಣಾ ಪ್ರಕ್ರಿಯೆ ಆರಂಭವಾದರೆ, ಯಾವುದೇ ನ್ಯಾಯಾಲಯ ಮಧ್ಯಪ್ರವೇಶಿಸಬಾರದು ಎಂದು ಸುಪ್ರೀಂ ಕೋರ್ಟ್‌ನ ಹಲವು ತೀರ್ಪುಗಳಲ್ಲಿ ಹೇಳಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ.ಎಂ. ಕಾನ್ವಿಲ್ಕರ್ ಹಾಗೂ ಡಿ.ವೈ. ಚಂದ್ರಚೂಡ ಅವರನ್ನು ಒಳಗೊಂಡ ಪೀಠ ಹೇಳಿದೆ. ಅಲ್ಪಸಂಖ್ಯಾತ ಸಮುದಾಯವನ್ನು ಆರ್ಥಿಕ ಹಾಗೂ ಸಾಮಾಜಿಕವಾಗಿ ಮೇಲೆತ್ತುವ ಭರವಸೆ ನೀಡುವುದನ್ನು ಧರ್ಮದ ಹೆಸರಿನಲ್ಲಿ ಮತ ಯಾಚಿಸುವುದು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ. ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಮುತಾಲಿಕ್ ಅವರು ಕಾನೂನು ಪರಿಹಾರಗಳನ್ನು ಕಂಡುಕೊಳ್ಳಬಹುದು ಎಂದು ಪೀಠ ತಿಳಿಸಿದೆ. ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯಲ್ಲಿರುವ ಈ ಮನವಿ ಅಳಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ರಾಷ್ಟ್ರೀಯ ಹಿಂದೂ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು.





