ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಭೈರೇಗೌಡಗೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಮೇ 11: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಭೈರೇಗೌಡ ಅವರ ವಿರುದ್ದ ಕ್ರಮ ಜರುಗಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಮುಖ್ಯ ಚುನಾವಣಾ ಅಧಿಕಾರಿ ಮತ್ತು ಕೃಷ್ಣಭೈರೇಗೌಡ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಸಂಬಂಧ ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಡಾ.ಸಿ.ಎಸ್.ರಘು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ರಜಾಕಾಲದ ಏಸದಸ್ಯ ಪೀಠ ಈ ಆದೇಶ ಮಾಡಿತು.
ಚುನಾವಣಾ ಅಭ್ಯರ್ಥಿಗಳು ಮತದಾರರ ಯಾವುದೇ ವೈಯಕ್ತಿಕ ವಿವರಗಳನ್ನು ಬಳಕೆ ಮಾಡಿಕೊಳ್ಳುವಂತಿಲ್ಲ ಎಂದು ಚುನಾವಣಾ ನೀತಿ ಸಂಹಿತೆ ಹೇಳುತ್ತದೆ. ಆದರೆ, ಕೃಷ್ಣಭೈರೇಗೌಡ ಅವರು ನನ್ನ ಭಾವಚಿತ್ರ ಹಾಗೂ ಹೆಸರುಗಳನ್ನು ತಮ್ಮ ಆ್ಯಪ್‌ನಲ್ಲಿ ಬಳಸಿಕೊಂಡಿದ್ದಾರೆ. ಈ ಕುರಿತಂತೆ ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು. ಆದರೆ, ಆಯೋಗವು ನನ್ನ ದೂರು ಆಧರಿಸಿ ಈವರೆಗೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ.
ಅಲ್ಲದೆ, ತಮ್ಮ ದೂರು ಆಧರಿಸಿ ಕಾನೂನು ಕ್ರಮ ಜರುಗಿಸುವಂತೆ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ. ಅರ್ಜಿಯಲ್ಲಿ ಕೃಷ್ಣಭೈರೇಗೌಡ ಅವನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.







