ನಾಳೆ ಮತ ಎಣಿಕೆ: ನಿಷೇಧಾಜ್ಞೆ ಜಾರಿ

ಬೆಂಗಳೂರು, ಮೇ 14: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುವ ಕೇಂದ್ರಗಳ ವ್ಯಾಪ್ತಿಯಲ್ಲಿ ಮೇ 15 ರಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್, ನಾಳೆ ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆ ವರೆಗೆ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144ನೇದ್ದರ ಅನ್ವಯ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಅವಧಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪಾಗಿ ಓಡಾಡುವುದನ್ನು, ಜೀವಕ್ಕೆ ಹಾನಿ ಮಾಡುವ, ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವ, ಕ್ಷಾರಪದಾರ್ಥ ಸೇರಿದಂತೆ ಸ್ಫೋಟಕ ವಸ್ತುಗಳನ್ನು, ಯಾವುದೇ ದಾಹಕ ವಸ್ತು ಇತ್ಯಾದಿಗಳನ್ನು ಜತೆಗಿಟ್ಟುಕೊಂಡು ಹೋಗುವುದನ್ನು, ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಯಾವುದೇ ಸಭೆ-ಸಮಾರಂಭ ಅಥವಾ ಮೆರವಣಿಗೆ ನಡೆಸುವುದನ್ನು ಸಹ ನಿಷೇಧಿಸಲಾಗಿದ್ದು, ಶವ ಸಂಸ್ಕಾರ, ಮದುವೆ ಹಾಗೂ ಧಾರ್ಮಿಕ ಸಭೆ-ಸಮಾರಂಭಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.
Next Story





