ಮೋದಿಯಿಂದ ಅಧಿಕಾರ ದುರುಪಯೋಗ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಮೇ 16: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರಕಾರ ರಚಿಸಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಬುಧವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಪಡೆದಿದ್ದರೂ ಬಿಜೆಪಿ ಮೈತ್ರಿ ಸರಕಾರ ರಚಿಸಿತು. ಆದರೆ, ಕರ್ನಾಟಕದಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರಕಾರ ರಚಿಸಲು ಬಿಡುವುದಿಲ್ಲ ಎಂದು ಮೋದಿ ಹೇಳುತ್ತಿದ್ದಾರೆ. ಇದು ಅಧಿಕಾರದ ದುರುಪಯೋಗವಲ್ಲದೆ ಮತ್ತೇನು ಎಂದು ಪ್ರಶ್ನಿಸಿದರು.
ಸರಕಾರಿ ಸಂಸ್ಥೆಗಳ ದುರುಪಯೋಗ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಆದಾಯ ತೆರಿಗೆ ಇಲಾಖೆ, ಸಿಬಿಐ, ಜಾರಿ ನಿರ್ದೇಶನಾಲಯ ಮತ್ತಿತರ ಸಂಸ್ಥೆಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.
Next Story