ಕರ್ನಾಟಕದಲ್ಲಿ ಸರಕಾರ ರಚನೆಗೆ ಬಿಜೆಪಿಗೆ ಆಹ್ವಾನ ಪ್ರಶ್ನಿಸಿ ರಾಮ್ ಜೇಠ್ಮಲಾನಿ ಸುಪ್ರೀಂಕೋರ್ಟ್ ಗೆ ಅರ್ಜಿ

ಹೊಸದಿಲ್ಲಿ, ಮೇ 17: ಕರ್ನಾಟಕದಲ್ಲಿ ಬಿಜೆಪಿಗೆ ಸರಕಾರ ರಚನೆಗೆ ಆಹ್ವಾನ ನೀಡಿರುವ ರಾಜ್ಯಪಾಲ ವಿಆರ್ ವಾಲಾರ ನಿರ್ಧಾರವನ್ನು ಪ್ರಶ್ನಿಸಿ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಸುಪ್ರೀಂಕೋರ್ಟ್‌ಗೆ ಇಂದು ಅರ್ಜಿ ಸಲ್ಲಿಸಿದ್ದಾರೆ.
ಜೇಠ್ಮಲಾನಿ ವೈಯಕ್ತಿಕವಾಗಿ ತುರ್ತು ಅರ್ಜಿಯನ್ನು ಸಲ್ಲಿಸಿದ್ದು, ಇಂದು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಜಸ್ಟಿಸ್‌ಗಳಾದ ಎ.ಎಂ. ಖಾನ್ವೀಲ್ಕರ್ ಹಾಗೂ ಡಿ.ವೈ. ಚಂದ್ರಚೂಡ್ ಅವರಿದ್ದ ನ್ಯಾಯಪೀಠ, ನಾಳೆ (ಮೇ 18) ಜಸ್ಟಿಸ್ ಎಕೆ ಸಿಕ್ರಿ ನೇತೃತ್ವದ ತ್ರಿಸದಸ್ಯರ ಪೀಠದ ಎದುರು ಈ ವಿಷಯ ಪ್ರಸ್ತಾವಿಸುವಂತೆ ಜೇಠ್ಮಲಾನಿಗೆ ಸೂಚನೆ ನೀಡಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿಗೆ ಸರಕಾರ ರಚನೆಗೆ ಆಹ್ವಾನ ನೀಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ರಾತ್ರಿ 2:10 ರಿಂದ 5:28ರ ತನಕ ವಿಚಾರಣೆ ನಡೆಸಿದ ಜಸ್ಟಿಸ್ ಎಕೆ ಸಿಕ್ರಿ ನೇತೃತ್ವದ ನ್ಯಾಯಪೀಠ ಬಿಎಸ್ ಯಡಿಯೂರಪ್ಪ ಗುರುವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಡೆ ಹೇರಲು ನಿರಾಕರಿಸಿತ್ತು. ಶುಕ್ರವಾರ ಬೆಳಗ್ಗೆ 10:30ಕ್ಕೆ ವಿಚಾರಣೆ ಮುಂದೂಡಿತ್ತು.





