ರೈತರ ಹೆಸರಿನಲ್ಲಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಮೇ 17: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಯಡಿಯೂರಪ್ಪ ಕನ್ನಡ ಭಾಷೆಯಲ್ಲಿ, ದೇವರ ಹಾಗೂ ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಎಂದಿನಂತೆ ಶ್ವೇತ ವಸ್ತ್ರಧಾರಿಯಾಗಿದ್ದ ಯಡಿಯೂರಪ್ಪ,ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಹಸಿರು ಶಾಲು ಹೊದ್ದಿದ್ದರು. ಆರು ನಿಮಿಷಗಳ ಕಾಲ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ, ಯಡಿಯೂರಪ್ಪಅವರಿಗೆ ಅಧಿಕಾರದ ಮತ್ತು ಗೋಪ್ಯತಾ ಪ್ರಮಾಣ ವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಎನ್.ಅನಂತ್‌ಕುಮಾರ್, ಶಾಸಕರಾದ ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಇನ್ನಿತರ ಗಣ್ಯರು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
ರಾಜ್ಯದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಕಾರ್ಯಕ್ರಮವನ್ನು ನಿರೂಪಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್. ರಾಜು, ಮುಖ್ಯಮಂತಿಯವರ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಈ ಮುನ್ನ 2007ರ ನವೆಂಬರ್ 12 ರಲ್ಲಿ ಪ್ರಪ್ರಥಮ ಬಾರಿಗೆ ಯಡಿಯೂರಪ್ಪ, ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದರು. ತದನಂತರ, 2008ರ ಮೇ 30 ರಂದು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು. ಇದೀಗ ಮೂರನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ.







