ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಆಸೆ ಪಡದೆ ಆತ್ಮಾವಲೋಕನ ಮಾಡಿಕೊಳ್ಳಲಿ: ಆರ್.ಅಶೋಕ್

ಬೆಂಗಳೂರು, ಮೇ 17: ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್‌ನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ತಮ್ಮ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳುವುದನ್ನು ಬಿಟ್ಟು ಹಿಂಬಾಗಿಲಿನ ಮೂಲಕ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿರುವುದು ಸರಿಯಲ್ಲವೆಂದು ಬಿಜೆಪಿ ಮುಖಂಡ ಆರ್.ಅಶೋಕ್ ತಿಳಿಸಿದರು.
ಗುರುವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ, ಧರ್ಮಗಳನ್ನು ವಿಭಜಿಸಿ ಸಮಾಜದಲ್ಲಿ ಅಶಾಂತಿ, ಗೊಂದಲ ಸೃಷ್ಟಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರ್ವಾಧಿಕಾರಿ ನೀತಿ ಕಾಂಗ್ರೆಸ್ ಸೋಲಿಗೆ ಕಾರಣವಾಗಿದೆ. ರಾಜ್ಯದ ಜನತೆ ಕಾಂಗ್ರೆಸ್‌ನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಜನರ ಈ ತೀರ್ಪನ್ನು ಕಾಂಗ್ರೆಸ್ ನಾಯಕರು ಒಪ್ಪಿಕೊಳ್ಳಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಹಾವು-ಮುಂಗಸಿ ರೀತಿಯಲ್ಲಿ ಜಗಳ ಆಡಿರುವ ಸಾಕಷ್ಟು ಉದಾಹರಣೆಯಿದೆ. ಈ ಎರಡು ಪಕ್ಷಗಳ ನಾಯಕರ ನಡುವೆ ರಾಜಕೀಯವಲ್ಲದೆ, ವೈಯಕ್ತಿಕ ದ್ವೇಷವು ಇದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್-ಜೆಡಿಎಸ್ ಒಂದಾಗಿ ಸರಕಾರ ನಡೆಸಲು ಸಾಧ್ಯವೆ ಎಂದು ಅವರು ಪ್ರಶ್ನಿಸಿದರು.
ಕಾಂಗ್ರೆಸ್‌ಗೆ ನೈತಿಕತೆಯಿಲ್ಲ: ಕಾಂಗ್ರೆಸ್ ಸೋತಿದ್ದರು ಹಿಂಬಾಗಿಲಿನ ಮೂಲಕ ಅಧಿಕಾರ ಹಿಡಿಯಲು ಹೊಂಚು ಹಾಕುತ್ತಿದ್ದಾರೆ. ಅದರ ಭಾಗವಾಗಿ ಕಾಂಗ್ರೆಸ್ ಶಾಸಕರು ವಿಧಾನಸೌಧದ ಪ್ರತಿಭಟನೆ ಮಾಡುತ್ತಿದ್ದಾರೆ. ಜನತೆ ನೀಡಿದ ತೀರ್ಪಿಗೆ ಗೌರವ ಕೊಡದೆ ನಡೆದುಕೊಳ್ಳುತ್ತಿರುವ ಕಾಂಗ್ರೆಸ್‌ಗೆ ನೈತಿಕತೆ ಇಲ್ಲವೆಂದು ಅವರು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆಯಿದೆ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್‌ನ್ನು ಹೀನಾಯವಾಗಿ ಸೋಲಿಸಿದ್ದಾರೆ. ಹೀಗಾಗಲೆ ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆಯಿರುವಾಗ ಜೆಡಿಎಸ್ ಜೊತೆ ಸೇರಿ ಹೇಗೆ ಸರಕಾರ ರಚಿಸುತ್ತಾರೆ ಎಂದು ಬಿಜೆಪಿ ನಾಯಕ ಅರವಿಂದ ಲಿಂಬಾವಳಿ ತಿಳಿಸಿದರು.







