ಮೌಲಾನಾ ಆಜಾದ್ ಮಾದರಿ ಶಾಲೆಗೆ ಅರ್ಜಿ ಆಹ್ವಾನ
ಉಡುಪಿ, ಮೇ 18: ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ 2018-19 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ಪ್ರವೇಶಕ್ಕೆ ಅಲ್ಪಸಂಖ್ಯಾತ ಸಮುದಾಯ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ದರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಶಾಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಶೇ.75 ಹಾಗೂ ಇತರರಿಗೆ ಶೇ. 25 ಸ್ಥಾನಗಳು ಹಾಗೂ ಪ್ರತಿ ತರಗತಿಯಲ್ಲಿ ಹೆಣ್ಣು ಮಕ್ಕಳಿಗೆ ಶೇ.50ರಷ್ಟು ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಇದು ವಸತಿ ರಹಿತ ಶಾಲೆ ಯಾಗಿದ್ದು, ಪ್ರತಿ ತರಗತಿ 60 ಸಂಖ್ಯಾಬಲ ಹೊಂದಿರುತ್ತದೆ. ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ 1 ಲಕ್ಷ ರೂ. ಇದ್ದು, ಅಂಗವಿಕಲರು, ಅನಾಥ, ಪೌರಕಾರ್ಮಿಕರ ಮಕ್ಕಳಿಗೆ ಸಹ ಮೀಸಲಾತಿ ಇರುತ್ತದೆ. ಇದಕ್ಕಾಗಿ 5ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮಾದರಿ ಶಾಲೆಯಲ್ಲಿ ದೊರೆಯುವ ಸೌಲಭ್ಯಗಳು: ಆಯ್ಕೆಯಾದ ವಿದ್ಯಾರ್ಥಿ ಗಳಿಗೆ 6ರಿಂದ 10ನೇ ತರಗತಿಯವರೆಗೆ ಆಂಗ ್ಲಮಾಧ್ಯಮದಲ್ಲಿ ಉಚಿತ ಶಿಕ್ಷಣ ದೊರೆಯುತ್ತದೆ. ಸುಸಜ್ಜಿತ ಕೊಠಡಿ ಮತ್ತು ಕುಡಿಯುವ ನೀರಿನ ವ್ಯವಸ್ಥೆ, ಸಮವಸ್ತ್ರ, ಪಠ್ಯಪುಸ್ತಕಗಳನ್ನು ಒದಗಿಸಲಾಗುವುದು.ನುರಿತ ಅನುಭವಿ ಶಿಕ್ಷಕರಿಂದ ಬೋಧನೆ, ಪ್ರತಿ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ, ಮಧ್ಯಾಹ್ನದ ಬಿಸಿ ಊಟ, ಕ್ಷೀರಭಾಗ್ಯ ಯೋಜನೆ ಲಭ್ಯವಿರುತ್ತದೆ.
ಕಂಪ್ಯೂಟರ್, ಪ್ರಿಂಟರ್, ಯು.ಪಿ.ಎಸ್, ಸಿಸಿ ಕ್ಯಾಮರ ಅಳವಡಿಕೆ ಮತ್ತು ಮೂಲಭೂತ ಸೌಲಭ್ಯಗಳು ಲಭ್ಯವಿರುತ್ತದೆ. ಈ ಸಂಸ್ಥೆಯಲ್ಲಿ ಪ್ರವೇಶಕ್ಕಾಗಿ ಅರ್ಜಿ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗೆ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಛೇರಿ (ದೂರವಾಣಿ: 0820-2520739), ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಣಿಪಾಲ (ದೂರವಾಣಿ: 2574596) ಹಾಗೂ ಕಾರ್ಕಳ ಮತ್ತು ಕುಂದಾಪುರ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸುವಂತೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಉಡುಪಿ ಇವರ ಪ್ರಕಟಣೆ ತಿಳಿಸಿದೆ.







