ಸಚಿವ ಸ್ಥಾನ ನೀಡಬೇಕೆಂದು ಯಾರ ಬಳಿಯೂ ಕೇಳಿಲ್ಲ: ಝಮೀರ್ ಅಹ್ಮದ್ ಖಾನ್

ಬೆಂಗಳೂರು, ಮೇ 24: ಸಚಿವ ಸ್ಥಾನ ನೀಡಬೇಕೆಂದು ನಾನು ಯಾರ ಬಳಿಯೂ ಕೇಳಿಲ್ಲ. ನನ್ನ ಅಗತ್ಯವಿದ್ದರೆ ಪಕ್ಷದ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ನೂತನ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಪಕ್ಷ ನನಗೆ ಸಚಿವ ಸ್ಥಾನ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಆದರೆ, ಸಚಿವ ಸ್ಥಾನ ನೀಡಿ ಎಂದು ತಾನು ಯಾರನ್ನೂ ಕೇಳಿಲ್ಲ. ದೇವರ ಬಳಿಯಷ್ಟೇ ಕೇಳಿಕೊಳ್ಳುತ್ತೇನೆ. ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಸಿದ್ದರಾಮಯ್ಯ, ಕೆ.ಸಿ. ವೇಣುಗೋಪಾಲ್, ಗುಲಾಂ ನಬಿ ಆಝಾದ್ ಸೇರಿದಂತೆ ಯಾರ ಬಳಿಯೂ ತಾನು ಸಚಿವ ಸ್ಥಾನದ ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟಣೆ ನೀಡಿದರು.
ಉಪ ಮುಖ್ಯಮಂತ್ರಿಯಾಗಿ ಪರಮೇಶ್ವರ್ ಅವರ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅವರಿಗೆ ಅಭಿನಂದನೆ ಸಲ್ಲಿಸಿರಲಿಲ್ಲ. ಹೀಗಾಗಿ ಅವರಿಗೆ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ ಎಂದ ಅವರು, ಪಕ್ಷದ ತೀರ್ಮಾನ ಹಾಗೂ ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದು ಹೇಳಿದರು.





