ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಯಡಿಯೂರಪ್ಪ ಆಯ್ಕೆ

ಬೆಂಗಳೂರು,ಮೇ.24: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ನಾಳಿನ ಅಧಿವೇಶನದಲ್ಲಿ ಬಿಎಸ್ ವೈ ಹೆಸರು ವಿಪಕ್ಷ ನಾಯಕನ ಸ್ಥಾನಕ್ಕೆ ಶಿಫಾರಸ್ಸು ಮಾಡುವುದಾಗಿ ತಿಳಿದುಬಂದಿದೆ. ಅಲ್ಲದೇ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್ ಮುಂದುವರಿಯುವ ಸಾಧ್ಯತೆಗಳಿದೆ. ನಾಳೆ ನಡೆಯುವ ವಿಶ್ವಾಸ ಮತದ ವಿರುದ್ಧವಾಗಿ ಮತ ಚಲಾಯಿಸಲು ಬಿಜೆಪಿಯ ಎಲ್ಲಾ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ .
ಅಲ್ಲದೇ ಈ ಸಭೆಯಲ್ಲಿ ಚುನಾವಣೆಯ ಸೋಲಿಗೆ ಕಾರಣವಾದ ಅಂಶಗಳ ಬಗ್ಗೆ ಅಭ್ಯರ್ಥಿಗಳಿಂದ ವಿವರಣೆ ಪಡೆದಿದ್ದು, ಬಿಜೆಪಿ ನಾಯಕರು ಪ್ರತಿ ಅಭ್ಯರ್ಥಿಗಳಿಂದಲೂ ಮಾಹಿತಿ ಪಡೆದುಕೊಂಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇದಕ್ಕಿಂತಲೂ ಹೆಚ್ಚಿನ ಶ್ರಮ ವಹಿಸಲು ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.





