ಸಿಎಂ ಕುಮಾರಸ್ವಾಮಿಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್

ಬೆಂಗಳೂರು, ಮೇ 26: ಸಚಿವ ಸಂಪುಟ ರಚನೆ ಸಂಬಂಧ ಚರ್ಚೆ ನಡೆಸಲು ನಾಳೆ ಮಧ್ಯಾಹ್ನದೊಳಗೆ ಹೊಸದಿಲ್ಲಿಗೆ ಬರುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಕಾಂಗ್ರೆಸ್ ಹೈಕಮಾಂಡ್ ಕರೆ ನೀಡಿದೆ.
ಶನಿವಾರ ರಾತ್ರಿ ಹೊಸದಿಲ್ಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಆದುದರಿಂದ, ಸ್ವತಃ ಮುಖ್ಯಮಂತ್ರಿಯನ್ನೇ ಕರೆದು ಚರ್ಚಿಸಲು ಕಾಂಗ್ರೆಸ್ ವರಿಷ್ಠರು ನಿರ್ಧರಿಸಿದ್ದಾರೆ.
ರಾಹುಲ್‌ಗಾಂಧಿ ನಾಳೆ ವಿದೇಶ ಪ್ರವಾಸಕ್ಕೆ ತೆರಳಲಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನದೊಳಗೆ ಹೊಸದಿಲ್ಲಿಗೆ ಬರುವಂತೆ ಕುಮಾರಸ್ವಾಮಿಗೆ ಕರೆ ನೀಡಲಾಗಿದೆ. ಮೊದಲ ಹಂತದಲ್ಲಿ 16 ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.
ಸಂಪುಟದಲ್ಲಿ ಯಾರಿಗೆ ಸ್ಥಾನ ಕಲ್ಪಿಸಬೇಕು ಎಂಬುದರ ಕುರಿತು ನಾಳೆ ನಡೆಯಲಿರುವ ಸಭೆಯಲ್ಲಿ ಅಂತಿಮಗೊಳ್ಳುವ ಸಾಧ್ಯತೆಗಳು ಹೆಚ್ಚಿವೆ. ಅದೇ ರೀತಿ ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನಾಗಿ ಯಾರನ್ನು ನೇಮಕ ಮಾಡಬೇಕು ಎಂಬುದರ ಕುರಿತು ರಾಹುಲ್‌ಗಾಂಧಿ ವಿದೇಶದಿಂದ ವಾಪಸ್ ಬಂದ ಬಳಿಕ ತೀರ್ಮಾನವಾಗಲಿದೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.







