ಆರ್.ಆರ್ ನಗರ ಕ್ಷೇತ್ರಕ್ಕೆ ಮೇ 28ಕ್ಕೆ ಚುನಾವಣೆ: ಮತದಾರರ ಮನಗೆಲ್ಲಲು ಕೊನೆ ಕ್ಷಣದ ಕಸರತ್ತು

ಬೆಂಗಳೂರು, ಮೇ 26: ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣದ ಕಾರಣ ಮುಂದೂಡಿದ್ದ ರಾಜರಾಜೇಶ್ವರಿನಗರ ಕ್ಷೇತ್ರದ ಚುನಾವಣಾ ಬಹಿರಂಗ ಪ್ರಚಾರಕ್ಕೆ ಶನಿವಾರ ಸಂಜೆ ತೆರೆ ಬಿದಿದ್ದು, ಸ್ಥಳೀಯ ಕಾರ್ಯಕರ್ತರು ಹಾಗೂ ಅಭ್ಯರ್ಥಿಗಳು ಮನೆ-ಮನೆ ಪ್ರಚಾರಕ್ಕೆ ಮುಂದಾಗಿದ್ದಾರೆ.
ಜೆಡಿಎಸ್ ವರಿಷ್ಠ ದೇವೇಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದಗೌಡ ಹಾಗೂ ಸಂಸದ ಡಿ.ಕೆ.ಸುರೇಶ್, ಶಾಸಕರಾದ ಬೈರತಿ ಬಸವರಾಜು, ಸೋಮಶೇಖರ್ ಸೇರಿ ಮೂರು ಪಕ್ಷಗಳ ಘಟಾನುಘಟಿಗಳು ಕೊನೆಯ ಕ್ಷಣದಲ್ಲಿ ಮತದಾರರ ಮನಗೆಲ್ಲಲು ತಮ್ಮ ಅಭ್ಯರ್ಥಿಗಳ ಪರ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದರು.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ರಚನೆಯಾಗಿದ್ದರೂ, ಕ್ಷೇತ್ರದ ಮೈತ್ರಿ ಸಂಬಂಧ ಮುಖಂಡರ ಮಧ್ಯೆ ಒಮ್ಮತ ಮೂಡಿಲ್ಲ. ಹೀಗಾಗಿ ಕಾಂಗ್ರೆಸ್- ಜೆಡಿಎಸ್ ಅಭ್ಯರ್ಥಿಗಳು ಎದುರಾಳಿಗಳಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸಿನ ಮುನಿರತ್ನ, ಜೆಡಿಎಸ್‌ನ ರಾಮಚಂದ್ರ, ಬಿಜೆಪಿಯ ಮುನಿರಾಜುಗೌಡ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ನಡುವಿನ ಗೊಂದಲದ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದ್ದು, ಮೋದಿ ನೇತೃತ್ವದ ಕೇಂದ್ರದ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ಕೈಗೊಂಡಿದ್ದಾರೆ. ಈ ಮಧ್ಯೆ ಜೆಡಿಎಸ್‌ನ ರಾಮಚಂದ್ರ ಹಿಂದಿನ ಸರಕಾರದ ಆಡಳಿತ ವೈಫಲ್ಯ ಹಾಗೂ ಎಚ್‌ಡಿಕೆ 20 ತಿಂಗಳ ಆಡಳಿತದ ಅಭಿವೃದ್ಧಿ ಕಾರ್ಯಗಳ ಲಾಭದ ನಿರೀಕ್ಷೆಯಲ್ಲಿದ್ದಾರೆ.
ಆದರೆ, ಹಾಲಿ ಶಾಸಕ ಮುನಿರತ್ನ 5 ವರ್ಷಗಳ ತನ್ನ ಅಭಿವೃದ್ಧಿ ಕಾರ್ಯಗಳನ್ನು ಪ್ರಚಾರ ಮಾಡುತ್ತಿದ್ದು, ಕ್ಷೇತ್ರದ ಜನತೆ ಕೈಹಿಡಿಯಲಿದ್ದಾರೆಂಬ ವಿಶ್ವಾಸದಲ್ಲಿದ್ದಾರೆ. ಮೇ 28ರಂದು ನಡೆಯುವ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಘಟಾನುಘಟಿ ಅಭ್ಯರ್ಥಿಗಳ ಹಣೆಬರಹ ಬರೆಯಲಿದ್ದಾರೆ.
ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಈಗಾಗಲೇ ಚುನಾವಣಾ ಆಯೋಗ ಅಗತ್ಯ ಕ್ರಮ ಕೈಗೊಂಡಿದ್ದು, ಕ್ಷೇತ್ರದಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೆ, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.







