ಮಡಿಕೇರಿ: ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಮಡಿಕೇರಿ,ಮೇ.28: ಇದೇ ಜೂನ್ 9 ರ ವರೆಗೆ ಹಮ್ಮಿಕೊಳ್ಳಲಾಗಿರುವ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಅಭಿಯಾನಕ್ಕೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸೋಮವಾರ ಚಾಲನೆ ನೀಡಿದರು.
ನಗರದ ಜಿಲ್ಲಾಸ್ಪತ್ರೆಯ ಸೆಮಿನಾರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅತಿಸಾರ ಭೇದಿ ತೀವ್ರ ನಿಯಂತ್ರಣ ಪಾಕ್ಷಿಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ, ರಾಷ್ಟ್ರ ಅಭಿವೃದ್ಧಿ ಸಾಧಿಸಬೇಕಾದರೆ ಪ್ರತಿಯೊಬ್ಬರೂ ಆರೋಗ್ಯವಂತರಾಗಿರಬೇಕು. ಆಗಿದ್ದಲ್ಲಿ ಮಾತ್ರ ಅಭಿವೃದ್ಧಿ ಹೊಂದಿದ ದೇಶವಾಗಲು ಸಾಧ್ಯ ಎಂದು ಜಿಲ್ಲಾಧಿಕಾರಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ರಾಷ್ಟ್ರದಲ್ಲಿ ಅತಿಸಾರ ಭೇದಿಯಿಂದ ಸಾವಿರಾರು ಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ಅತಿಸಾರ ಭೇದಿ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಆ ನಿಟ್ಟಿನಲ್ಲಿ ಸ್ವಚ್ಚತೆ ಕಡೆ ವಿಶೇಷ ಗಮನ ಹರಿಸಬೇಕಿದೆ ಎಂದರು. ಐದು ವರ್ಷದೊಳಗಿನ ಮಕ್ಕಳ ಬಗ್ಗೆ ಹೆಚ್ಚಿನ ಗಮನ ವಹಿಸಬೇಕಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಮೂಡಿಸಬೇಕು. ಆ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ನಾನಾ ಇಲಾಖೆಗಳು ಕೈಜೋಡಿಸಬೇಕಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಅವರು ಮಾತನಾಡಿ ದೇಶದಲ್ಲಿ ಅತಿಸಾರ ಭೇದಿಯಿಂದ ಶೇ.10 ರಷ್ಟು ಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಅತಿಸಾರ ಭೇದಿಯಿಂದ ಸಾವನ್ನಪ್ಪುವುದನ್ನು ನಿಯಂತ್ರಣ ಮಾಡಲು ಮಕ್ಕಳ ದೇಹದಲ್ಲಿ ನೀರಿನಾಂಶ ಕಡಿಮೆಯಾಗದಂತೆ ನೋಡಿಕೊಳ್ಳಬೇಕಿದೆ. ಆ ದಿಸೆಯಲ್ಲಿ ಭೇದಿಯಾದ ತಕ್ಷಣ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗಬೇಕಿದೆ ಎಂದು ಅವರು ಸಲಹೆ ಮಾಡಿದರು.
ಆಶಾ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಐದು ವರ್ಷದೊಳಗಿನ ಮಕ್ಕಳಿಗೆ ಒ.ಆರ್.ಎಸ್. ಪೊಟ್ಟಣ ವಿತರಣೆ ಮಾಡಲಿದ್ದಾರೆ. ಜೊತೆಗೆ ಗುಂಪು ಸಭೆಗಳನ್ನು ನಡೆಸಿ ಪ್ರಾತ್ಯಕ್ಷಿಕೆ ಮೂಲಕ ಮಕ್ಕಳಿಗೆ ಒ.ಆರ್.ಎಸ್. ನೀಡುವ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದರು. ಜಿಲ್ಲೆಯಲ್ಲಿ ಅತಿಸಾರ ಭೇದಿ ನಿಯಂತ್ರಣ ಸಂಬಂಧ ಜೂನ್ 9 ವರಗೆ ಪಾಕ್ಷಿಕ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಒಆರ್‍ಎಸ್ ಪೊಟ್ಟನ ನೀಡುವುದು ಜೊತೆಗೆ ಝಿಂಕ್ ಮಾತ್ರೆಯನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಆರ್.ಸಿ.ಎಚ್.ಅಧಿಕಾರಿ ಡಾ.ನಿಲೇಶ್ ಅವರು ಮಾತನಾಡಿ, ಅತಿಸಾರ ಭೇದಿಯಿಂದ ಉಂಟಾಗುವ ಶಿಶು ಮರಣ ತಡೆಯುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಐದು ವರ್ಷದೊಳಗಿನ ಮಕ್ಕಳು ಅತಿಸಾರ ಭೇದಿಯಿಂದ ಸಾವಿಗೆ ಸಿಲುಕುತ್ತಿದ್ದಾರೆ. ಆದ್ದರಿಂದ ಅತಿಸಾರ ಭೇದಿಯನ್ನು ನಿಯಂತ್ರಿಸುವಲ್ಲಿ ಓ.ಆರ್.ಎಸ್.ದ್ರಾವಣ ನೀಡುವುದು ಮತ್ತು ಝಿಂಕ್ ಮಾತ್ರೆ ನೀಡಿ ಶಿಶು ಮರಣ ತಡೆಯುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ದೇಶದಲ್ಲಿ ಪ್ರತಿ ವರ್ಷ ಅತಿಸಾರ ಭೇದಿಯಿಂದ 1.2 ಲಕ್ಷ ಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಮಕ್ಕಳ ಸಾವನ್ನು ನಿಯಂತ್ರಣ ಮಾಡುವುದೇ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಅವರು ಹೇಳಿದರು. ಆರೋಗ್ಯ ಕಾರ್ಯಕರ್ತೆಯರು, ಎ.ಎನ್.ಎಂ.ಗಳು ಗ್ರಾಮಗಳಿಗೆ ಭೇಟಿ ನೀಡಿ ಈ ಬಗ್ಗೆ ಮಾಹಿತಿ ನೀಡಲಿದ್ದಾರೆ. ಶಾಲೆಗಳು, ಅಂಗನವಾಡಿಗಳಲ್ಲಿ ಅತಿಸಾರ ಭೇದಿ ತಡೆಯುವ ನಿಟ್ಟಿನಲ್ಲಿ ಪ್ರಾತ್ಯಕ್ಷಿಕೆ ಏರ್ಪಡಿಸಲಾಗುತ್ತದೆ ಎಂದು ಡಾ.ನಿಲೇಶ್ ಅವರು ತಿಳಿಸಿದರು.
“ಶೌಚದ ನಂತರ, ಆಟವಾಡಿದ ನಂತರ, ಪ್ರಾಣಿಗಳನ್ನು ಮುಟ್ಟಿದ ನಂತರ, ಮಕ್ಕಳ ಶೌಚವನ್ನು ಶುಚಿಗೊಳಿಸಿದ ನಂತರ, ಅಡುಗೆ ಮಾಡುವ ಮೊದಲು, ಮಕ್ಕಳಿಗೆ ತಿನ್ನಿಸುವ ಮೊದಲು ಕಡ್ಡಾಯವಾಗಿ ಸಾಬೂನಿನಿಂದ ಕೈ ತೊಳೆಯಬೇಕು” ಎಂದರು.
ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಡಾ.ವಿಶಾಲ್ ಅವರು ಮಾತನಾಡಿ ವಿಶ್ವದಲ್ಲಿ ಐದು ವರ್ಷದೊಳಗಿನ ಸಾವಿರಾರು ಮಕ್ಕಳು ಅತಿಸಾರ ಭೇದಿಯಿಂದ ಸಾವನ್ನಪ್ಪುತ್ತಿದ್ದು, ಮಕ್ಕಳ ಸಾವನ್ನು ತಡೆಯಲು ವೈಯಕ್ತಿಕ ಮತ್ತು ಸಮುದಾಯ ಸ್ವಚ್ಚತೆ ಕಡೆ ಗಮನಹರಿಸುವುದು ಅಗತ್ಯವಾಗಿದೆ ಎಂದರು.
ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಶಿವಕುಮಾರ್, ಕ್ಷಯರೋಗ ನಿಯಂತ್ರಣಾಧಿಕಾರಿ ಎ.ಸಿ.ಶಿವಕುಮಾರ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಪಾರ್ವತಿ, ಸ್ತ್ರೀ ರೋಗ ತಜ್ಞರಾದ ಡಾ.ಮಂಜುನಾಥ್ ಇತರರು ಇದ್ದರು. ಶ್ರೂಶ್ರೂಷಕಿ ಚಿತ್ರಾ ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್ ನಿರೂಪಿಸಿ, ವಂದಿಸಿದರು.







