ಕೃಷಿ ಸಾಲ ಮನ್ನಾ-ಕೃಷಿಕರ ಸಮಸ್ಯೆ: ರೈತ ಸಂಘಟನೆಗಳೊಂದಿಗೆ ಮೇ 30ರಂದು ಸಿಎಂ ಸಭೆ

ಬೆಂಗಳೂರು, ಮೇ 29: ಕೃಷಿ ಸಾಲ ಮನ್ನಾ, ರೈತರ ಆತ್ಮಹತ್ಯೆ ಹಾಗೂ ಕೃಷಿಕರ ಇತರ ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮೇ 30ರಂದು ಬೆಳಗ್ಗೆ 11.15ಕ್ಕೆ ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತಸಂಘಟನೆಗಳ ಪ್ರತಿನಿಧಿಗಳು ಹಾಗೂ ಪ್ರಗತಿಪರ ಕೃಷಿಕರ ಸಭೆ ಕರೆದಿದ್ದಾರೆ.
ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪರನ್ನು ಸಭೆಗೆ ಆಹ್ವಾನಿಸಲಾಗಿದೆ. ಅಲ್ಲದೆ, ಪ್ರತಿ ಜಿಲ್ಲೆಯಿಂದ ಪ್ರಗತಿಪರ ಕೃಷಿಕರನ್ನು ಈ ಸಭೆಗೆ ಆಹ್ವಾನಿಸಲಾಗಿದೆ. ರೈತ ಪ್ರತಿನಿಧಿಗಳೊಂದಿಗೆ ನಡೆಯಲಿರುವ ಸಭೆಗೂ ಮುನ್ನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಬೆಳಗ್ಗೆ 11 ಗಂಟೆ ಸಂಪುಟ ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ. ಈ ಸಭೆಯನ್ನು ಏರ್ಪಡಿಸುವ ಬಗ್ಗೆ ಮುಖ್ಯಮಂತ್ರಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಿ.ವಿ.ಪ್ರಸಾದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಂ.ಲಕ್ಷ್ಮಿನಾರಾಯಣ ಜೊತೆ ಚರ್ಚೆ ನಡೆಸಿದರು.





